ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ 150 ಕೋಟಿ ರೂಗಳಿಗೆ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ 91 ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ: ಸಭೆಯಲ್ಲಿ ಮಾತನಾಡಿದ ಶಾಸಕರಾದ ಕೆ.ಎಸ್. ಈಶ್ವರಪ್ಪ ವಿಶ್ವೇಶ್ವರ ಹೆಗಡೆ ಕಾಗೇರಿ, ಹರತಾಳು ಹಾಲಪ್ಪ ಮತ್ತಿತರರು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು, ಶಾಲಾ ಕಟ್ಟಡ, ಅಂಗನವಾಡಿಗಳು ಶಿಥಿಲಗೊಂಡಿದ್ದು, ದುರಸ್ತಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಮಂಡಳಿಯಲ್ಲಿ ಪ್ರಸಕ್ತ ವರ್ಷದಲ್ಲಿ 52.22 ಕೋಟಿ ರೂ. ಅನುದಾನ ಲಭ್ಯವಿದ್ದು ಇದನ್ನು 150 ಕೋಟಿ ರೂ. ಗಳಿಗೆ ಹೆಚ್ಚಿಸಲಾಗುವುದು. ಮಂಡಳಿ ವ್ಯಾಪ್ತಿಯ ಎಲ್ಲ 88 ಶಾಸಕರ ವ್ಯಾಪ್ತಿಗೆ ತಲಾ 1 ಕೋಟಿ ರೂ. ಅನುದಾನ ನಿಗದಿ ಪಡಿಸಿ, ಉಳಿದ ಮೊತ್ತವನ್ನು ಮುಖ್ಯಮಂತ್ರಿಗಳ ವಿವೇಚನೆಯಂತೆ ಹೆಚ್ಚಿನ ಸಮಸ್ಯೆ ಇರುವ ಕಡೆಗಳಲ್ಲಿ ವೆಚ್ಚ ಮಾಡಲು ಬಳಕೆ ಮಾಡಲಾಗುವುದು ಎಂದು ತಿಳಿಸಿದರು. ಇದಕ್ಕೆ ಎಲ್ಲ ಸದಸ್ಯರು ಸಮ್ಮತಿ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಹಿಂದೆ ಯಾವ ಮುಖ್ಯಮಂತ್ರಿಯೂ ಏಕಕಾಲಕ್ಕೆ ಈ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮೊದಲ ಬಾರಿಗೆ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ಲಾಘಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಮುಜರಾಯಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹಾಗೂ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ:
ನಂತರ ನಡೆದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಪ್ರತಿ ಶಾಸಕರ ವ್ಯಾಪ್ತಿಗೆ ತಲಾ ಒಂದು ಕೋಟಿ ರೂ. ಗಳಂತೆ 91 ಕೋಟಿ ರೂ.ಗಳ ಕಾಮಗಾರಿಗಳಿಗೆ ಹೆಚ್ಚುವರಿ ಕ್ರಿಯಾಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಈ ವರ್ಷ ಮಂಡಳಿಗೆ 52 ಕೋಟಿ ರೂ. ಮಂಜೂರಾಗಿದ್ದು, ಈ ವರೆಗೆ 32 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಈ ಅನುದಾನದ ಸದ್ಬಳಕೆ ಮಾಡಿಕೊಂಡು ಸರ್ಕಾರದ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಅವರು ಎಲ್ಲ ಶಾಸಕರಿಗೆ ಸಲಹೆ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮುಜರಾಯಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹಾಗೂ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ