Latest

ಮಹಾರಾಷ್ಟ್ರಕ್ಕೆ ರಾಜ್ಯದ ನಿಯೋಗ -ಕೋರೆ, ಕವಟಗಿಮಠ ಮನವಿಗೆ ಸಿಎಂ ಸ್ಪಂದನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯಸಭಾ ಸದಸ್ಯರೂ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ ಆಗಿರುವ ಡಾ. ಪ್ರಭಾಕರ್ ಕೋರೆ ಮತ್ತು ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಗಂಭೀರ ಪರಿಸ್ಥಿತಿ ಕುರಿತು ಮನದಟ್ಟು ಮಾಡಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳು ತೀವ್ರ ಬರಗಾಲಕ್ಕೆ ತುತ್ತಾಗಿದ್ದು, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಭೀಕರ ಸಮಸ್ಯೆ ಉಂಟಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದು, ಈ ಸಮಸ್ಯೆಯ ಪರಿಹಾರಕ್ಕಾಗಿ ಮಹಾರಾಷ್ಟ್ರ ಸರ್ಕಾರವನ್ನು ಸಂಪರ್ಕಿಸಿ, ರಾಜ್ಯಕ್ಕೆ 4 ಟಿ.ಎಂ.ಸಿ ನೀರು ಬಿಡಿಸಲು ಕ್ರಮ ಜರುಗಿಸಬೇಕು ಎಂದು ಕೋರಿದರು. ಅಲ್ಲದೆ,  ಎರಡೂ ರಾಜ್ಯಗಳ ನಡುವೆ ಒಂದು ಶಾಶ್ವತ ಒಡಂಬಡಿಕೆ ಮಾಡಿಕೊಳ್ಳಬೇಕೆಂದು ಅವರು ಆಗ್ರಹಿಸಿದರು. 

ಮುಖ್ಯಮಂತ್ರಿಗಳು ತಕ್ಷಣ   ಪ್ರಧಾನ ಕಾರ್ಯದರ್ಶಿ  ಡಾ.ರಮಣರೆಡ್ಡಿಯವರನ್ನು ಕರೆದು, ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಕಛೇರಿಯನ್ನು ಸಂಪರ್ಕಿಸಿ, ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸಮಯ ನಿಗಧಿ ಮಾಡುವಂತೆ ಸೂಚಿಸಿದರು.

ಒಂದು ನಿಯೋಗ ಹೋಗಿ ನೀರು ಬಿಡುವ ಸಂಬಂಧ ಹಾಗೂ ಎರಡೂ ರಾಜ್ಯಗಳ ನಡುವೆ ಒಂದು ಶಾಶ್ವತ ಒಡಂಬಡಿಕೆ ಮಾಡಿಕೊಳ್ಳುವ ಸಂಬಂಧ ಚರ್ಚಿಸೋಣ ಮತ್ತು ಈ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳೋಣ ಎಂದು ಕುಮಾರಸ್ವಾಮಿ ಹೇಳಿದರು.

 ತೀರಾ ಅವಶ್ಯವಿರುವ ಸ್ಥಳಗಳಲ್ಲಿ ನೀರು ನಿಲ್ಲಲು ಅನುಕೂಲವಾಗುವಂತೆ ಹಲವಾರು ಕಡೆಗಳಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ಗಳನ್ನು ನಿರ್ಮಿಸುವುದಾಗಿಯೂ ಮುಖ್ಯಮಂತ್ರಿ ಭರವಸೆ ನೀಡಿದರು. ಈ ಭಾಗದ ನೀರಿನ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಪ್ರಭಾಕರ ಕೋರೆಯವರನ್ನು ಮತ್ತು ಆ ಭಾಗದ ಜನ ಪ್ರತಿನಿಧಿಗಳ ಸಭೆಯನ್ನು ಸಧ್ಯದಲ್ಲೇ ಕರೆಯುವುದಾಗಿಯೂ ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button