ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮಾ.18 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಉಪ ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಉಪ ರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿರುವುದರಿಂದ ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿಟಿಯು ಪರಸ್ಪರ ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು. ವಿಮಾನ ನಿಲ್ದಾಣದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದವರೆಗಿನ ಮಾರ್ಗವನ್ನು ತಕ್ಷಣ ದುರಸ್ತಿಗೊಳಿಸಬೇಕು. ಪಾಲಿಕೆ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಹೀಗೆ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಸ್ತೆಗಳನ್ನು ದುರಸ್ತಿಗೊಳಿಸಿ ಅಡೆತಡೆ ಮುಕ್ತ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.
ವೇದಿಕೆಯ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಪರಿಶೀಲಿಸಬೇಕು. ವಿದ್ಯುಚ್ಛಕ್ತಿ ವ್ಯವಸ್ಥೆ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಹೆಸ್ಕಾಂ ಅಧಿಕಾರಿಗಳು ಪರಿಶೀಲಿಸಿ ಪ್ರಮಾಣಪತ್ರ ನೀಡಬೇಕು. ಬಿಎಸ್‌ಎನ್‌ಎಲ್ ವತಿಯಿಂದ ಸೂಕ್ತ ದೂರವಾಣಿ ಸಂಪರ್ಕ ವ್ಯವಸ್ಥೆ, ಬ್ರಾಡಬ್ಯಾಂಡ್ ಸಂಪರ್ಕ ಕಲ್ಪಿಸಬೇಕು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಅಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು. ತುರ್ತು ಚಿಕಿತ್ಸೆಗೆ ಆಸ್ಪತ್ರೆಯನ್ನು ಗುರುತಿಸಿ ಅಲ್ಲಿಯೂ ಕೂಡ ವೈದ್ಯರು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಪೊಲೀಸ್ ಆಯುಕ್ತ ಲೋಕೇಶಕುಮಾರ ಮಾತನಾಡಿ, ಭದ್ರತೆಯ ದೃಷ್ಟಿಯಿಂದ ಮಾಧ್ಯಮ ಸೇರಿದಂತೆ ವಿವಿಧ ಬಗೆಯ ಅಧಿಕಾರಿ, ಸಿಬ್ಬಂದಿಗೆ ಸೂಕ್ತ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ವಿಟಿಯು ಕುಲಸಚಿವ ಸತೀಶ ಅಣ್ಣಿಗೇರಿ ಮಾತನಾಡಿ, ಉಪ ರಾಷ್ಟ್ರಪತಿಗಳ ಕಚೇರಿಯಿಂದ ಈಗಾಗಲೇ ಕಾರ್ಯಕ್ರಮ ಪಟ್ಟಿ ಅನುಮೋದನೆಗೊಂಡಿದೆ. ಅಂದು ಬೆಳಗ್ಗೆ 9.50 ಕ್ಕೆ ವಿಶ್ವವಿದ್ಯಾಲಯಕ್ಕೆ ಆಗಮಿಸಲಿರುವ ಉಪ ರಾಷ್ಟ್ರಪತಿಗಳು 10 ಗಂಟೆಗೆ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ, 11.30ಕ್ಕೆ ಹಿಂದಿರುಗಲಿದ್ದಾರೆ ಎಂದು ವಿವರಿಸಿದರು.
ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ್ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಇಬ್ರಾಹಿಂ ಮೈಗೂರ, ಅಪರ ಜಿಲ್ಲಾಧಿಕಾರಿ ಡಾ. ಬೂದೆಪ್ಪ ಎಚ್.ಬಿ., ವಾಯುಪಡೆ ಅಧಿಕಾರಿ ಅಲೋಕ್, ಗುಪ್ತಚರ ಇಲಾಖೆಯ ಎಸ್‌ಪಿ ಚನ್ನಬಸವಣ್ಣ, ಉಪ ವಿಭಾಗಾಧಿಕಾರಿ ಡಾ. ಕವಿತಾ ಯೋಗಪ್ಪನವರ, ಲೋಕೋಪಯೋಗಿ, ಆರೋಗ್ಯ, ಅಗ್ನಿಶಾಮಕ, ಆಹಾರ, ಸಾಂಬ್ರಾ ವಿಮಾನ ನಿಲ್ದಾಣ, ಬಿಎಸ್‌ಎನ್‌ಎಲ್, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.