ಪ್ರಗತಿವಾಹಿನಿ ಸುದ್ದಿ, ಮೂಡಲಗಿ:
ಹದಗೆಟ್ಟಿರುವ ಮೂಡಲಗಿ-ಶಿವಾಪೂರ(ಹ)-ಖಾನಟ್ಟಿ ರಸ್ತೆಯನ್ನು ಸ್ವಂತ ನಿಧಿಯಿಂದ ದುರಸ್ತಿಪಡಿಸಲಾಗುವುದು ಎಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.
ಶಿವಾಪೂರ(ಹ) ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ರಸ್ತೆಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಲಗಿಯಿಂದ ಶಿವಾಪೂರ(ಹ), ಖಾನಟ್ಟಿ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಸ್ವಂತ ನಿಧಿಯಿಂದ ನಿರ್ಮಿಸಿಕೊಡಲಾಗುತ್ತಿದೆ ಎಂದು ಹೇಳಿದರು.
ಮೂಡಲಗಿ-ಶಿವಾಪೂರ(ಹ)-ಖಾನಟ್ಟಿ ರಸ್ತೆ ಹದಗೆಟ್ಟಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಈ ರಸ್ತೆಯನ್ನು ದುರಸ್ತಿ ಮಾಡಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.
೩ ತಿಂಗಳೊಳಗಾಗಿ ಮೂಡಲಗಿ, ಶಿವಾಪೂರ(ಹ), ಖಾನಟ್ಟಿ, ಮುನ್ಯಾಳ, ಹುಣಶ್ಯಾಳ ಪಿವೈ ವರೆಗಿನ ರಸ್ತೆ ಕಾಮಗಾರಿಯನ್ನು ಆರಂಭಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ರಸ್ತೆ ಕಾಮಗಾರಿಗೆ ಅನುದಾನ ನೀಡುವಂತೆ ಈಗಾಗಲೇ ಪತ್ರ ಬರೆಯಲಾಗಿದೆ. ಅಲ್ಲಿಯವರೆಗೆ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲು ಸ್ವಂತ ಅನುದಾನದಿಂದ ರಸ್ತೆ ಕಾಮಗಾರಿಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಮೂಡಲಗಿ ಪುರಸಭೆ ಮಾಜಿ ಅಧ್ಯಕ್ಷ ಈರಣ್ಣಾ ಹೊಸೂರ, ಪುರಸಭೆ ಮಾಜಿ ಉಪಾಧ್ಯಕ್ಷ ರವಿ ಸೋನವಾಲ್ಕರ, ಪ್ರಭಾಶುಗರ ನಿರ್ದೇಶಕ ಮಲ್ಲಿಕಾರ್ಜುನ ಕಬ್ಬೂರ, ಶಿವಾಪೂರ(ಹ) ಗ್ರಾಮದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ