ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚುವರಿಯಾಗಿ 500ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಅವರು ಮಂಗಳವಾರ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನದಲ್ಲಿ ಕಡಿತ ಮಾಡಲಾಗಿದೆ ಎಂಬ ಆರೋಪಗಳು ನಿರಾಧಾರ. ಹಿಂದಿನ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ಮೈತ್ರಿ ಸರ್ಕಾರದಲ್ಲಿ ಮುಂದುವರಿಸಲಾಗಿದೆ. ಈ ಬಾರಿಯ ಬಜೆಟ್‍ನಲ್ಲಿ ಕಳೆದ ಸಾಲಿನ ಬಜೆಟ್‍ಗಿಂತ 500ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಮುಸ್ಲಿಂ, ಕ್ರಿಶ್ಚಿಯನ್, ಜೈನರು ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗಾಗಿ ಹಲವು ವಿನೂತನ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರು ಎಲ್ಲಾ ಸಮಸ್ಯೆಗಳಿಂದ ಹೊರಬಂದು ನೆಮ್ಮದಿಯಿಂದ ಬದುಕಬೇಕೆಂಬುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಜಾರಿಗೊಳಿಸಲಾಗುತ್ತಿರುವ ಯೋಜನೆಗಳ ಮಾಹಿತಿ ಪುಸ್ತಕವನ್ನು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶ ವಿ.ಗೋಪಾಲ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಕೆ.ಜೆ.ಜಾರ್ಜ್, ಯು.ಟಿ,ಖಾದರ್, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ರಹೀಂ ಖಾನ್, ಖನೀಸ ಫಾತಿಮ, ಸಿ.ಎಂ.ಇಬ್ರಾಹಿಂ, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ