ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಲೋಕಸಭಾ ಚುನಾವಣೆಯಲ್ಲಿ ಭಾರೀ ಮುಖಭಂಗದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳಲ್ಲಿ ಭಾರೀ ಬಿರುಕು ಉಂಟಾಗಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಬಹುದು ಎನ್ನುವ ವದಂತಿ ಹರಡಿದೆ.
28ರಲ್ಲಿ 28 ಸ್ಥಾನವನ್ನೂ ಗೆಲ್ಲುವ ಕನಸು ಕಂಡಿದ್ದ ಕುಮಾರಸ್ವಾಮಿ ಕೇವಲ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಮೈತ್ರಿ ಪಕ್ಷ ಕಾಂಗ್ರೆಸ್ ಕೂಡ ಕೇವಲ 2 ಸ್ಥಾನಕ್ಕೆ ಸಮಾಧಾನಪಡಬೇಕಾಗಿದೆ.
ಅದರಲ್ಲೂ ಪ್ರತಿಷ್ಠೆಯ ಕ್ಷೇತ್ರಗಳಾದ ತುಮಕೂರಲ್ಲಿ ದೇವೇಗೌಡ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ, ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಬಳ್ಳಾರಿಯಲ್ಲಿ ಉಗ್ರಪ್ಪ, ಚಿಕ್ಕಬಳ್ಳಾಪುರದಲ್ಲಿ ವೀರಪ್ಪ ಮೋಯ್ಲಿ ಸೋಲು ಎರಡೂ ಪಕ್ಷಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಈಗಾಗಲೆ ಕಾಂಗ್ರೆಸ್ ಶಾಸಕರು ಅಲ್ಲಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದು, ಜೆಡಿಎಸ್ ಜೊತೆಗಿನ ಮೈತ್ರಿಯೇ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಜೆಡಿಎಸ್ ಗೆ ನೀಡಿರುವ ಬೆಂಬಲವನ್ನು ಈಗಲಾದರೂ ಹಿಂತೆಗೆದುಕೊಂಡು ಕಾಂಗ್ರೆಸ್ ಉಳಿಸಬೇಕೆಂದು ಒತ್ತಡ ಹೇರುತ್ತಿದ್ದಾರೆ.
ಮೈತ್ರಿ ಮುಂದುವರಿದರೆ 50ಕ್ಕಿಂತ ಹೆಚ್ಚು ಶಾಸಕರು ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೆಡಿಎಸ್ ಕುಟುಂಬ ರಾಜಕಾರಣ ಕಾಂಗ್ರೆಸ್ ಅವನತಿಗೆ ಕಾರಣವಾಗುತ್ತಿದೆ ಎನ್ನುತ್ತಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬಹುದು ಎನ್ನಲಾಗುತ್ತಿದೆ. ರಾಷ್ಟ್ರೀಯ ಟಿವಿ ಚಾನೆಲ್ ಗಳು ಕೂಡ ಕುಮಾರಸ್ವಾಮಿ ರಾಜೀನಾಮೆಯ ಸುದ್ದಿ ಪ್ರಸಾರ ಮಾಡುತ್ತಿವೆ.
ಒಟ್ಟಾರೆ ಈಗಿನ ಬೆಳವಣಿಗೆಯಿಂದ ರಾಜ್ಯ ಸಮ್ಮಿಶ್ರ ಸರಕಾರದಲ್ಲಿ ಅಲ್ಲೋಲಕಲ್ಲೋಲವಾಗುವುದು ಗ್ಯಾರಂಟಿ. ಇನ್ನು 2-3 ದಿನದಲ್ಲಿ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಲಾಗುತ್ತಿದೆ.