Latest

ಕಾರು ಸಾಲ ಪಾರದರ್ಶಕತೆಗಾಗಿ ಐರಾವತ ಜಾರಿ: ಪ್ರಿಯಾಂಕ್ ಖರ್ಗೆ

 

 
  ಪ್ರಗತಿವಾಹಿನಿ ಸುದ್ದಿ, ಸುವರ್ಣವಿಧಾನಸೌಧ, ಬೆಳಗಾವಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ನೀಡಲಾಗುವ ಸಾಲ ಸೌಲಭ್ಯ ಯೋಜನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಐರಾವತ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ವಿಧಾನಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಶಾಸಕ ಆರ್. ಅಶೋಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಕಾರು ಖರೀದಿಸಲು ಸಾಲ ಸೌಲಭ್ಯ ಯೋಜನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಪ್ರಸಕ್ತ ಸಾಲಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಐರಾವತ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಹಾಗೂ ಅನುದಾನದ ಲಭ್ಯತೆ ಆಧಾರದ ಮೇಲೆ ಫಲಾನುಭವಿಗಳ ಗುರಿ ನಿಗದಿಗೊಳಿಸಲಾಗುವುದು. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಗದಿತ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಕಳೆದ ಮೂರು ವರ್ಷದಲ್ಲಿ ಪರಿಶಿಷ್ಟ ಜಾತಿಯ ೫೫೪ ಹಾಗೂ ಪರಿಶಿಷ್ಟ ಪಂಗಡದ ೧೪೩ ಫಲಾನುಭವಿಗಳಿಗೆ ಕಾರು ಸಾಲ ಸೌಲಭ್ಯ ಯೋಜನೆಯ ಲಾಭವನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಶಾಸಕ ಆಚಾರ್ ಹಾಲಪ್ಪ ಬಸಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ಇರುವ ಪರಿಶಿಷ್ಟ ಪಂಗಡಗಳಿಗೆ ಸೇರಿದ ಆದಿವಾಸಿ ಸಮುದಾಯಗಳಿಗಾಗಿ ೨೦೧೮-೧೯ ನೇ ಸಾಲಿನಿಂದ ಜಾರಿಗೆ ಬರುವಂತೆ ನವಗ್ರಾಮ ನಿರ್ಮಾಣ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ಈಗಾಗಲೇ ಗ್ರಾಮಗಳ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದರು.
ಈ ಯೋಜನೆಯಡಿಯಲ್ಲಿ ಗ್ರಾಮಗಳಿಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ, ಒಳಚರಂಡಿ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ, ಕಾಲೋನಿಗಳ ಸಂಪರ್ಕ ರಸ್ತೆ ನಿರ್ಮಾಣ, ವಿದ್ಯುತ್ ಸಂಪರ್ಕ, ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button