ಪ್ರಗತಿವಾಹಿನಿ ಸುದ್ದಿ, ಸುವರ್ಣ ವಿಧಾನ ಸೌಧ, ಬೆಳಗಾವಿ
ಪ್ರವಾಹ ಹಾಗೂ ಭೂ-ಕುಸಿತದಿಂದ ಕೊಡಗು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಉಂಟಾಗಿರುವ ತೋಟಗಾರಿಕೆ ಬೆಳೆಗಳ ನಷ್ಟ ಹಾಗೂ ಮೂಲಸೌಕರ್ಯ ಹಾನಿಗಳಿಗೆ ೭೨೨.೦೬ ಕೋಟಿ ರೂ. ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಬೇಡಿಕೆಯ ಪೈಕಿ ೫೪೬.೨೧ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈ ಮೊತ್ತದಲ್ಲಿ ರೈತರ ಖಾತೆಗಳಿಗೆ ಪರಿಹಾರ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಸಚಿವ ಆರ್. ವಿ.ದೇಶಪಾಂಡೆ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಕಲಾಪ ವೇಳೆ ಶಾಸಕ ಕೆ. ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಡಗು ಸೇರಿದಂತೆ ಪ್ರವಾಹ ಪೀಡಿತ ಎಂಟು ಜಿಲ್ಲೆಗಳಲ್ಲಿ ಹಾನಿಗಳಿಗಾಗಿ ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿಯ ಮಾರ್ಗಸೂಚಿಗಳನ್ವಯ ಕೋರಲಾದ ಪರಿಹಾರದ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ೫೪೬.೨೧ ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರವನ್ನು ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದ ತುರ್ತು ಕಾಮಗಾರಿಗಳಿಗೆ ೨೫ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೆ, ವಿವಿಧ ಇಲಾಖೆಗಳ ಮೂಲಕ ಮೂಲಸೌಕರ್ಯ ಕಾಮಗಾರಿಗಳ ಅನುಷ್ಠಾನಗೊಳಿಸಲು ೮೫ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಸುಮಾರು ೩೦೨ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅಂತೆಯೇ, ಈ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ೧೯೯೯ ರ ೪ (ಜಿ) ವಿನಾಯತಿ ನೀಡಲಾಗಿದೆ. ಅಲ್ಲದೆ ಉತ್ತಮ ಗುಣಮಟ್ಟದ ಸೇವೆಯಲ್ಲಿ ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಸಂಗ್ರಹಣಾ ಪ್ರಾಧಿಕಾರವು ದೃಢಪಡಿಸಿಕೊಳ್ಳಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಕ್ರಿಯಾಯೋಜನೆಗಳನ್ನು ಅನುಮೋದನೆ ಪಡೆದ ನಂತರ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರ್. ವಿ. ದೇಶಪಾಂಡೆ ಮಾಹಿತಿ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ