
ಪ್ರಗತಿವಾಹಿನಿ ಸುದ್ದಿ, ಹಾಸನ: ಮೈಸೂರು ಮಾರ್ಗದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗಣಪತಿ ವಿಸರ್ಜನೆ ಮೆರವಣಿಗೆಯ ಮೇಲೆ ಲಾರಿ ಹರಿದು ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 2oಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ದುರ್ಘಟನೆಯಿಂದಾಗಿ ಇಡೀ ಜಿಲ್ಲೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
200ಕ್ಕೂ ಹೆಚ್ಚು ಗ್ರಾಮಸ್ಥರು ಗಣೇಶನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಹಾರಾಷ್ಟ್ರದಿಂದ ಬಂದಂತಹ ಲಾರಿ ಏಕಾಏಕಿ ಮೆರವಣಿಗೆ ಮೇಲೆ ಎರಗಿದ ಪರಿಣಾಮ ಅವಘಡ ಸಂಭವಿಸಿದೆ. ಸದ್ಯ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.
ಗಣೇಶ ಚತುರ್ಥಿಯ ಅಂತಿಮ ದಿನವಾದ ಶುಕ್ರವಾರ , ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಸಂಭ್ರಮದಿಂದ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸಾಗಿತ್ತು. ಹೊಸಹಳ್ಳಿ-ಮೊಸಳೆ ರಸ್ತೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಗ್ರಾಮಸ್ಥರು ಭಕ್ತಿ ಭಾವದಿಂದ ಗಣೇಶನ ಮೂರ್ತಿಯನ್ನು ಹೊತ್ತೊಯ್ಯುತ್ತಿದ್ದರು. ಇದೇ ವೇಳೆ, ವಿರುದ್ದ ದಿಕ್ಕಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ನೇರವಾಗಿ ಮೆರವಣಿಗೆಯ ಜನಸಮೂಹದ ಮೇಲೆ ನುಗ್ಗಿದೆ.
ಲಾರಿಯ ಚಕ್ರಕ್ಕೆ ಸಿಲುಕಿದ ಹಲವು ಜನರು ಸ್ಥಳದಲ್ಲೇ ನಜ್ಜುಗುಜ್ಜಾಗಿದ್ದು, ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗು ಹಿಮ್ಸ್ ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ತಕ್ಷಣವೇ ರಕ್ಷಣಾ ಕಾರ್ಯ ಆರಂಭವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಹಾಸನದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಾಗಿಸಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ.
ಸಿಎಂ ಸಂತಾಪ
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ.