Latest

ಗೋಕಾಕಕ್ಕೆ ನಾಳೆ ಯಡಿಯೂರಪ್ಪ: 10 ಸಾವಿರ ಕಾರ್ಯಕರ್ತರು ಭಾಗಿ – ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಗೋಕಾಕ :
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಗೋಕಾಕ ನಗರಕ್ಕೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ನಡೆಯಲಿರುವ ಸಮಾವೇಶದಲ್ಲಿ 10 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಇಲ್ಲಿಯ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಲೋಕಸಭಾ ಚುನಾವಣೆ ನಿಮಿತ್ಯ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರಗಳ ಪ್ರಚಾರ ಸಭೆ ಮುಂಜಾನೆ 10 ಗಂಟೆಗೆ ನಡೆಯಲಿದೆ. ಯಡಿಯೂರಪ್ಪ ಅವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಶಾಸಕರಾದ ಆನಂದ ಮಾಮನಿ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನೀಲ ಬೆನಕೆ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ಅರುಣ ಶಹಾಪೂರ, ಹಣಮಂತ ನಿರಾಣಿ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಸಂಜಯ ಪಾಟೀಲ, ಎಂ.ಎಲ್. ಮುತ್ತೆನ್ನವರ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಜಗದೀಶ ಹಿರೇಮನಿ, ಮುಖಂಡರಾದ ಅಶೋಕ ಪೂಜೇರಿ, ಈರಪ್ಪ ಕಡಾಡಿ ಸೇರಿದಂತೆ ಬಿಜೆಪಿ ರಾಜ್ಯ ಹಾಗೂ ಜಿಲ್ಲಾ ಘಟಕದ ಹಲವು ಪದಾಧಿಕಾರಿಗಳು ಭಾಗಿಯಾಗಲಿದ್ದಾರೆಂದು ಅವರು ಹೇಳಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೊಪ್ಪಳದಿಂದ ಹೆಲಿಕಾಪ್ಟರ್ ಮೂಲಕ ಗೋಕಾಕ ನಗರಕ್ಕೆ ಬೆಳಿಗ್ಗೆ 9.30 ಗಂಟೆಗೆ ಆಗಮಿಸಲಿದ್ದಾರೆ. ಇದಕ್ಕಾಗಿ ಎನ್‍ಎಸ್‍ಎಫ್ ಶಾಲಾ ಆವರಣದಲ್ಲಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. 
ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವ್ಹಿ. ದೇಮಶೆಟ್ಟಿ, ಅರಭಾವಿ ಮಂಡಲ ಅಧ್ಯಕ್ಷ ಸುಭಾಸ ಪಾಟೀಲ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೇಮಾ ಭಂಡಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ ಮಾದರ, ಗೋಕಾಕ ಕ್ಷೇತ್ರದ ಚುನಾವಣಾ ಸಮೀತಿ ಸಂಚಾಲಕ ಚಿದಾನಂದ ದೇಮಶೆಟ್ಟಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಪ್ರಮೋದ ನುಗ್ಗಾನಟ್ಟಿ, ಬಸವರಾಜ ಹಿರೇಮಠ, ಸಂತೋಷ ಹುಂಡೇಕಾರ, ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕರು ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳ ಬಿಜೆಪಿ ಪದಾಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಪೂರ್ವಭಾವಿ ಸಭೆಯನ್ನು ನಡೆಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button