ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ತುಮಕೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಘೋಷಿಸಿದ್ದಾರೆ.
ಇದರಿಂದಾಗಿ ಹಲವು ದಿನಗಳಿಂದ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ತಮ್ಮ ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿರುವ ದೇವೇಗೌಡರಿಗೆ ಕ್ಷೇತ್ರವಿರಲಿಲ್ಲ. ಪಕ್ಕದ ಮಂಡ್ಯದಲ್ಲೂ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಗಾಗಿ ದೇವೇಗೌಡ ಕಾಂಗ್ರೆಸ್ ನ ಮುದ್ದಹನುಮೇಗೌಡ ಅವರ ಕ್ಷೇತ್ರವನ್ನು ಗಿಟ್ಟಿಸಿಕೊಂಡಿದ್ದಾರೆ.
ಜೆಡಿಎಸ್ ತುಮಕೂರು ಕ್ಷೇತ್ರ ತಮಗೇ ಬೇಕು ಎಂದು ಪಟ್ಟು ಹಿಡಿದಿತ್ತು. ಆದರೆ ಉಪಮುಖ್ಯಮಂತ್ರಿ ಜಿ ಪರಮೇಶ್ವರ್‌ಗೆ ತುಮಕೂರು ಕ್ಷೇತ್ರವನ್ನು ಬಿಟ್ಟುಕೊಡಲು ಮನಸ್ಸಿರಲಿಲ್ಲ. ಬಳಿಕ ದೇವೇಗೌಡರೇ ಸ್ವತಃ ಸ್ಪರ್ಧಿಸುವುದಾದರೆ ಬಿಟ್ಟುಕೊಡುತ್ತೇನೆ ಎಂದು ಹೇಳಿದ್ದರು.
ಆದರೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವವರೆಗೂ ಗೊಂದಲವಿತ್ತು. ಅದಾದ ಬಳಿಕ ಈಗ ದೇವೇಗೌಡರೇ ಸ್ವತಃ ಹೇಳಿಕೆ ನೀಡಿದ್ದು, ತಾವು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಹಾಗೂ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಅಂತಿಮವಾಗಿ ಆ ಕುತೂಹಲ, ಚರ್ಚೆಗಳೆಲ್ಲವೂ ಕೊನೆಗೊಂಡಿದೆ. ಇನ್ನೊಂದೆಡೆ ಬೆಂಗಳೂರು ಉತ್ತರದಿಂದ ಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹಗಳಿಗೂ ತೆರೆಬಿದ್ದಿದೆ.
ಇನ್ನು ಇದೇ ವೇಳೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಮಾತನಾಡಿದ ಎಚ್.ಡಿ ದೇವೇಗೌಡ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಎಲ್ಲ ಅಂತಿಮವಾಗಿದೆ. ಯಾವುದೂ ಬಾಕಿ ಇಲ್ಲ. ತುಮಕೂರು, ಮಂಡ್ಯ, ಹಾಸನ, ಶಿವಮೊಗ್ಗ, ಉಡುಪಿ ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ವಿಜಯಪುರ ಜಿಲ್ಲೆಯ ಅಭ್ಯರ್ಥಿ ಹೆಸರು ಅಂತಿಮಗೊಳಿಸುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.
ತುಮಕೂರಿನ ಕಾಂಗ್ರೆಸ್ ಹಾಲಿ ಸಂಸದ ಮುದ್ದಹನುಮೇಗೌಡ ಸಹ ಸೋಮವಾರವೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ತುಮಕೂರಲ್ಲಿ ಮೈತ್ರಿಗೆ ಭಂಗ: ಮುದ್ದಹನುಮೇಗೌಡ ಕಣಕ್ಕೆ
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ ಮತ್ತು ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ