Kannada NewsKarnataka NewsLatest

*ಬಿ.ಎನ್.ಗರುಡಾಚಾರ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ ಕಂಡ ದಕ್ಷ ಪೊಲೀಸ್ ಅಧಿಕಾರಿ B.N. ಗರುಡಾಚಾರ್ ಇಂದು ಮುಂಜಾನೆ 3 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಬಿ.ಎನ್.ಗರುಡಾಚಾರ್ ಅವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡಿದ್ದರು.

ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್‌ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು.

ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರವು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು. 

Home add -Advt

ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿವೆ.  90ರ ಹರೆಯದಲ್ಲೂ ಗುರುಡಾಚಾರ್, ಮಗನ ಪ್ರತಿಷ್ಠಿತ ಗರುಡಾ ಮಾಲ್‌ನಲ್ಲಿ, ಏಳನೆ ಮಹಡಿಯಲ್ಲಿ ಯುವಕರನ್ನೂ ನಾಚಿಸುವ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು.

ಶನಿವಾರ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅವರು ಅಂತ್ಯಕ್ರಿಯೆ ನಡೆಯಲಿದೆ.

ಪರಿಚಯ:

ಬಯಲುಸೀಮೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆಯ ಕೃಷಿ ಕುಟುಂಬದಲ್ಲಿ 1929ರಲ್ಲಿ ಹುಟ್ಟಿದ ಬಿ.ಎನ್. ಗರುಡಾಚಾರ್, ಹುಟ್ಟುತ್ತಲೇ ಕಷ್ಟವನ್ನು ಬೆನ್ನಿಗೆ ಕಟ್ಟಿಕೊಂಡು ಬಂದವರು. ಎಮ್ಮೆ, ದನ ಕಾಯುವ ಕೆಲಸ ಮಾಡಿ, ಸಗಣಿ ಬಾಚಿ ಬೇಸಾಯದ ಬಾಳುವೆ ಕಲಿತವರು. ತಂದೆಯ ಅಕಾಲಿಕ ಮರಣದ ನಂತರ ಕಡು ಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಅಮ್ಮ ಆಸರೆಯಾದರು. ಬಂಧುಗಳ, ಹಿತೈಷಿಗಳ ನೆರವಿನಲ್ಲಿ ಬೆಳೆದು, ಹಳ್ಳಿಯ ಕೂಲಿ ಮಠದಲ್ಲಿ ವಿದ್ಯಾಭ್ಯಾಸ ಆರಂಭಿಸಿದ ಬಾಲಕ ಗರುಡಾಚಾರ್, ಗೊರೂರು, ಹಾಸನ, ಮೈಸೂರುಗಳಲ್ಲಿ ಅಲೆದಾಡಿ, ಅವರಿವರ ಮನೆಯಲ್ಲಿ ಆಶ್ರಯ ಪಡೆದು, ವಾರಾನ್ನ ಉಂಡು ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. ಮುಂದುವರಿದು, 1953ರಲ್ಲಿ ಐಪಿಎಸ್ ಪಾಸ್ ಮಾಡಿ, ಮೊದಲಿಗರೆನಿಸಿಕೊಂಡರು.

ನಂತರ ಸರ್ವೇಯರ್, ಅಬಕಾರಿ ಇನ್ಸ್ಪೆಕ್ಟರ್ ಕೆಲಸಕ್ಕೆ ಸೇರಿದರು. ಅಲ್ಲಿಂದ ನೇರವಾಗಿ ಐಪಿಎಸ್ ಮಾಡಿ, ತಿರುವನ್ವೇಲಿಯಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹುದ್ದೆ ಅಲಂಕರಿಸಿದ ಗುರುಡಾಚಾರ್‌ಗೆ, ಬಿಂಡಿಗನವಿಲೆಯ ಬಡತನ, ಹಸಿವು, ಅವಮಾನ, ಹಿಂಜರಿಕೆ, ಮುಗ್ಧತೆ, ಪ್ರಾಮಾಣಿಕತೆ ಎಲ್ಲವೂ ಬೆನ್ನಿಗಿದ್ದವು. ಅವುಗಳ ಅಗಾಧ ಅನುಭವ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಪ್ರಶಸ್ತಿ, ಪುರಸ್ಕಾರ, ಪ್ರಶಂಸೆ ಪಡೆಯುವಲ್ಲಿ ಉದ್ದಕ್ಕೂ ಸಹಕರಿಸಿದ್ದವು. ಪೊಲೀಸ್ ವೃತ್ತಿಯಲ್ಲಿ ಶಿಸ್ತು ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಗರುಡಾಚಾರ್ ಬಹಳ ಬೇಗ ಉನ್ನತ ಸ್ಥಾನಗಳನ್ನು ಅಲಂಕರಿಸಿ, ಅಧಿಕಾರಸ್ಥ ರಾಜಕಾರಣಿಗಳ ಕಣ್ಣಿಗೆ ಬಿದ್ದಿದ್ದರು. ಕೊಪ್ಪಳ, ಹುಮ್ನಾಬಾದ್, ತುಮಕೂರು, ಬಳ್ಳಾರಿ, ಬೆಂಗಳೂರು ಜಿಲ್ಲಾ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿ ಹೆಸರಾಗಿದ್ದರು.

1975ರ ತುರ್ತು ಪರಿಸ್ಥಿತಿಯಲ್ಲಿ ಇಂಟಲಿಜೆನ್ಸ್ ಐಜಿಯಾಗಿ, ರಾಷ್ಟ್ರಮಟ್ಟದ ರಾಜಕೀಯ ನಾಯಕರನ್ನು ಬಂಧಿಸಿ, ಜೈಲಿಗೆ ಹಾಕುವ ಮೂಲಕ ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದರು. ದೇವರಾಜ ಅರಸರನ್ನು 1962ರಿಂದ ಬಲ್ಲವರಾಗಿದ್ದು, ಅವರು ಮುಖ್ಯಮಂತ್ರಿಯಾಗಿದ್ದಾಗ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡು, ನಾಲ್ಕು ವರ್ಷಗಳ ಕಾಲ ಕಮಿಷನರ್ ಹುದ್ದೆಯಲ್ಲಿದ್ದು, ಪ್ರತಿದಿನ ಅರಸು ಅವರೊಂದಿಗೆ ಮುಖಾಮುಖಿಯಾಗುತ್ತಿದ್ದರು.

ಮಾಧ್ಯಮ ಪ್ರಕಟಣೆ

ಬಿ.ಎನ್.ಗರುಡಾಚಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ

ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಬಿ.ಎನ್.ಗರುಡಾಚಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

“ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯ ಸುಧಾರಣೆಗಳನ್ನು ತಂದಂತಹ ಪ್ರಯೋಗಶೀಲ ಅಧಿಕಾರಿಯಾಗಿ ಗರುಡಾಚಾರ್ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರು ನಗರ ಬೆಳೆಯುತ್ತದೆ ಎನ್ನುವ ಅರಿವಿನಿಂದ 1963 ರಲ್ಲಿಯೇ ಬೆಂಗಳೂರಿನಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಪರಿಚಯಿಸಿದ್ದ ವ್ಯಕ್ತಿ.

ತಮ್ಮ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ಹೆಸರುವಾಸಿಯಾಗಿದ್ದ ಗರುಡಾಚಾರ್ ಅವರು ಇಂದಿನ ತಲೆಮಾರಿನ ಪೊಲೀಸ್ ಇಲಾಖೆಯವರಿಗೆ ಮಾದರಿ ಎನ್ನಬಹುದು. ಯಾವುದೇ ಲಾಬಿ, ಒತ್ತಡಗಳಿಗೆ ಮಣಿಯದೆ ಸಮಾಜಘಾತುಕರನ್ನು ಕಟ್ಟಿ ಹಾಕಿದವರು. ಕರ್ನಾಟಕ ಪೊಲೀಸ್ ವ್ಯವಸ್ಥೆಗೆ ಘನತೆ ತದ್ದುಕೊಟ್ಟವರು. ಇವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ.

1953 ರಲ್ಲಿಯೇ ಐಪಿಎಸ್ ಪಾಸು ಮಾಡಿ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಈ ಇಲಾಖೆಗೆ ಹಾಗೂ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಕಾರ್ಯದಕ್ಷತೆಯನ್ನು ನಾನು ಸಹ ಹತ್ತಿರದಿಂದ ನೋಡಿದ್ದೇನೆ. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಹಿರಿಯರಾದ ಗರುಡಾಚಾರ್ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಕುಟುಂಬ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

Back to top button