Latest

ಯಡಿಯೂರಪ್ಪ ಸುದ್ದಿಗಾಗಿ ಹೇಳಿಕೆ ನೀಡುವುದನ್ನು ಬಿಡಲಿ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಾಜ್ಯವು ಬರದಿಂದ ತತ್ತರಿಸುವಾಗ ರಾಜ್ಯ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂದು ಮಾನ್ಯ ವಿರೋಧ ಪಕ್ಷದ ನಾಯಕರು ಮಾಡಿರುವ ಟೀಕೆ ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕರೆಯಲು ಅನುಮತಿ ನೀಡಬಾರದು ಎಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಯಡಿಯೂರಪ್ಪನವರು ಈ ರೀತಿ ಟೀಕೆ ಮಾಡಿರುವುದು ಅವರ ನಿರಂತರ ಇಬ್ಬಗೆ ನೀತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಮುಖ್ಯ ಕಾರ್ಯದರ್ಶಿಗಳು ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಗಳಿದ್ದು ಅವರು ಈ ಅವಧಿಯಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಬರ ಪರಿಹಾರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ನಿಯಮಿತವಾಗಿ ಮಾಹಿತಿಯನ್ನೂ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನಿನ್ನೆ ಉಡುಪಿಗೆ ತೆರಳುವ ಮುನ್ನ ಮುಖ್ಯ ಕಾರ್ಯದರ್ಶಿ ಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ಮಾಧ್ಯಮಗಳಲ್ಲಿ ಈ ಕುರಿತು ಪ್ರಕಟವಾಗಿರುವ ವರದಿಗಳನ್ನು ಯಡಿಯೂರಪ್ಪ ಅವರು ಗಮನಿಸಿಲ್ಲ ಎನಿಸುತ್ತದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ ಪ್ರವರ್ಧಮಾನಕ್ಕೆ ಬರುತ್ತಿದ್ದು ಅಂತಹ ಒಂದು ಕೇಂದ್ರದಲ್ಲಿ ತಾವು ಚಿಕಿತ್ಸೆ ಪಡೆಯುತ್ತಿದ್ದು, ಯಡಿಯೂರಪ್ಪ ನವರು ಕೇವಲ ಸುದ್ದಿಗಾಗಿ ಇಂತಹ ಹೇಳಿಕೆಗಳನ್ನು ನೀಡುವ ಪ್ರವೃತ್ತಿಯನ್ನು ಕೈಬಿಡುವುದು ಒಳಿತು ಇಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button