Latest

ಲೋಕಸಭಾ ಚುನಾವಣೆ : ಮಾಹಿತಿ ವಿನಿಮಯಕ್ಕೆ ಪರಸ್ಪರ ಒಪ್ಪಿಗೆ

ಪ್ರಗತಿವಾಹಿನಿ ಸುದ್ದಿ,  ಬೆಳಗಾವಿ:

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದ ಗಡಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಸೋಮವಾರ ಚರ್ಚೆ ನಡೆಸಿದರು.
ಬೆಳಗಾವಿ ಜಿಪಂ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರೆಯ ರಾಜ್ಯದ ನಾಲ್ಕು ಜಿಲ್ಲೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಮಾದರಿ ನೀತಿ ಸಂಹಿತೆ ಪಾಲನೆ, ಭದ್ರತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಅಂತರ್ ರಾಜ್ಯದ ಗಡಿ ಮೂಲಕ ನಡೆಯುವ ಅಕ್ರಮ ಮದ್ಯ ಸಾಗಾಟ ತಡೆಗಟ್ಟುವಿಕೆ, ವಾಹನಗಳ ತಪಾಸಣೆ, ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡಯಿತು. ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಸ್ಥಾಪಿಸಲಾಗಿರುವ ೫೬ ಚೆಕ್ ಪೋಸ್ಟ್ ಗಳ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಯಿತು. ನೆರೆಯ ಮಹಾರಾಷ್ಟ್ರ ಮತ್ತು ಉತ್ತರ ಗೋವಾದಲ್ಲಿ ಬೆಳಗಾವಿ ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಗಳ ಮಾಹಿತಿಯನ್ನು ಒದಗಿಸುವುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದರು.

ಮಾಹಿತಿ ವಿನಿಮಯ:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಂತರ್ ರಾಜ್ಯಗಳಲ್ಲಿ ಸಂಚರಿಸುವ ವಾಹನಗಳ ತಪಾಸಣೆ, ಅಕ್ರಮ ಮದ್ಯ ಸಾಗಾಣಿಕೆ ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಅದೇ ರೀತಿ ಆಯಾ ಜಿಲ್ಲೆಗಳಿಂದ ಗಡಿಪಾರು ಮಾಡಲಾಗಿರುವ ಸಮಾಜಘಾತುಕ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಕೂಡ ಎಲ್ಲಾ ಗಡಿ ಜಿಲ್ಲೆಯ ಅಧಿಕಾರಿಗಳು ವಿನಿಮಯ ಮಾಡಿಕೊಳ್ಳುವುದಕ್ಕೆ ಸಮ್ಮತಿ ಸೂಚಿಸಿದರು.
ಬೆಳಗಾವಿ ಉತ್ತರ ವಲಯ ಐಜಿಪಿ ಎಚ್.ಜಿ.ಆರ್.ಸುಹಾಸ್, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್.ಸುಧೀರಕುಮಾರ್ ರೆಡ್ಡಿ, ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಅರುಣಕುಮಾರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಅದೇ ರೀತಿ ಬೆಳಗಾವಿ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ, ಸಿಂಧುದುರ್ಗ ಮತ್ತು ಉತ್ತರ ಗೋವಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಢಾಧಿಕಾರಿಗಳು, ಅಬಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button