Latest

*ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ: ಸರ್ಕಾರದ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ*

ಇದೊಂದು ಅವಿವೇಕತನ ಎಂದು ಕಿಡಿ


ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಣೆಗೆ ಸರ್ಕಾರ ಮುಂದಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೊಂದು ಅವಿವೇಕತನ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತೆ ಎಂಬ ಅಧಿಕ ಪ್ರಸಂಗದ ನಿಲುವು. ಸರ್ಕಾರವೇ ಸಮಾಜದ ಸ್ವಾಸ್ತ್ಯ ಹಾಳು ಮಾಡಲು ನಿಂತಂತೆ ಕಾಣ್ತಿದೆ. ಈ ಕಾರ್ಯಕ್ರಮ ನಡೆಯಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸಗಳಿವೆ, ಅದನ್ನು ಮಾಡಲಿ. ಉರ್ದು ಹಬ್ಬದ ತಲೆಹರಟೆ ನಿರ್ಧಾರ ಎಲ್ಲಿಂದ ಬಂತು, ಕೇಳಿದ್ಯಾರು? ಎಂದು ಪ್ರಶ್ನಿಸಿದ್ದಾರೆ.

ಸ್ಪಷ್ಟವಾಗಿ ಹೇಳುವುದಾದರೆ ಕನ್ನಡಿಗರ ಮೇಲೆ ಉರ್ದು ಭಾಷಿಕರನ್ನು, ಉರ್ದು ಭಾಷಿಕರ ಮೇಲೆ ಕನ್ನಡಿಗರನ್ನು ಎತ್ತಿಕಟ್ಟುವ ಹುನ್ನಾರ ಇದು. ಉರ್ದು ವಾರ್ತೆ ಬಗ್ಗೆ ನಡೆದ ಕೋಮುಗಲಭೆ ಸರ್ಕಾರ ಮರೆತಿದೆಯೇ? ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಳ್ಳುವುದು ಇದೇ ಅಲ್ಲವೇ? ಸಿಎಂ ಡಿಕೆಶಿ ಕೂಡಲೇ ಈ ಉರ್ದು ಹಬ್ಬದ ಹುಚ್ಚಾಟ ನಿಲ್ಲಿಸಬೇಕು. ಇಲ್ಲವಾದಲ್ಲಿ ನಾವೇ ಈ ಸರ್ಕಾರಕ್ಕೆ ಚಳಿ ಬಿಡಿಸಬೇಕಾಗುತ್ತದೆ. ಕೋಮುಗಲಭೆಗೆ ಸಂಚು ರೂಪಿಸಿರುವವರನ್ನು ದೂರ ಇಡಬೇಕು. ಈ ದುಸ್ಸಾಹಸಕ್ಕೆ ಇಳಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತೆ ಎಂದು ನಾರಾಯಣಗೌಡ ಎಚ್ಚರಿಸಿದ್ದಾರೆ.

urdu habba,vidhanasoudha,grand steps,karave,narayanagowda

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button