Latest

ಸಹಕಾರಿ ಯೂನಿಯನ್ ಕೂಡ ಬಾಲಚಂದ್ರ ಜಾರಕಿಹೊಳಿ ತೆಕ್ಕೆಗೆ

ಅಧ್ಯಕ್ಷರಾಗಿ ಬಸಗೌಡ ಪಾಟೀಲ, ಉಪಾಧ್ಯಕ್ಷರಾಗಿ ಬಸವಂತರಾಯ ಉಳ್ಳಾಗಡ್ಡಿ  ಅವಿರೋಧ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :

ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್‌ಗೆ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ಮೆಳವಂಕಿಯ ಬಸಗೌಡ ದುಂಡನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಬೆಳಗಾವಿ ತಾಲೂಕಿನ ಬಸ್ಸಾಪೂರದ ಬಸವಂತರಾಯ ನಾಗಪ್ಪ ಉಳ್ಳಾಗಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋಮವಾರದಂದು ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್‌ನ ಸಭಾಗೃಹದಲ್ಲಿ ೨೦೧೯-೨೦ನೇ ಸಾಲಿನಿಂದ ೨೦೨೩-೨೪ನೇ ಸಾಲಿನ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮುಂದಿನ ೫ ವರ್ಷಗಳ ಅವಧಿಗೆ ಅವಿರೋಧ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಕೆ.ಗೋಟೂರ ಪ್ರಕಟಿಸಿದರು.

ಬಾಲಚಂದ್ರ ಜಾರಕಿಹೊಳಿ ಸಾರಥ್ಯ :

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಈ ಅವಿರೋಧವಾಗಿ ಆಯ್ಕೆ ನಡೆದಿದೆ. ಮೇ ೧೦ ರಂದು ಜರುಗಿದ ಬೆಳಗಾವಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದರಿಂದ ಇದರ ಆಡಳಿತವನ್ನು ತಮ್ಮ ಸುಪರ್ಧಿಗೆ ತೆಗೆದುಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಜಿಲ್ಲಾ ಸಹಕಾರಿ ಯೂನಿಯನ್ ಆಡಳಿತ ಮಂಡಳಿಯ ಚುನಾವಣೆಯಲ್ಲಿಯೂ ಸಹ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಲ್ಲ ಸಂಘಗಳಿಗೆ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಜಿಲ್ಲೆಯಲ್ಲಿ ಸಹಕಾರಿ ಸಂಘಗಳಲ್ಲಿ ಬಾಲಚಂದ್ರ ಜಾರಕಿಹೊಳಿ ಮೇಲುಗೈ ಸಾಧಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಡೆಸಿದ ಸಂಧಾನದ ಫಲಶೃತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್‌ಗೆ ೧೬ ಸ್ಥಾನಗಳ ಪೈಕಿ ೧೫ ಸ್ಥಾನಗಳಿಗೆ ಏ.೨೩ ರಂದು ಅವಿರೋಧವಾಗಿ ಆಯ್ಕೆ ನಡೆದಿದೆ. ಕೇವಲ ಒಂದು ಸ್ಥಾನಕ್ಕೆ ಮಾತ್ರ ಏಪ್ರೀಲ್ ೨೯ ರಂದು ಚುನಾವಣೆ ನಡೆದಿದೆ. 

ಅಭಿನಂದನಾ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಉಮೇಶ ಕತ್ತಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಜಿಲ್ಲೆಯ ಎಲ್ಲ ಶಾಸಕರುಗಳ ಸಹಕಾರದಿಂದ ಜಿಲ್ಲಾ ಸಹಕಾರಿ ಯೂನಿಯನ್‌ಗೆ ಅವಿರೋಧವಾಗಿ ಆಯ್ಕೆ ನಡೆದಿದೆ ಎಂದ ಬಾಲಚಂದ್ರ,  ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಹಾಗೂ ಸಹಕಾರಿಗಳಿಗೆ  ಕೃತಜ್ಞತೆ ಅರ್ಪಿಸಿದರು. ಸಹಕಾರಿ ರಂಗದ ಅಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ಕೈ ಜೋಡಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಅಂಕಲಗಿ, ಕೆಎಂಎಫ್ ನಿರ್ದೇಶಕ ಎಸ್.ಎಸ್. ಮುಗಳಿ, ಸಹಕಾರಿ ಮುಖಂಡ ಹಾಗೂ ನ್ಯಾಯವಾದಿ ಬಿ.ಎಸ್. ಸುಲ್ತಾನಪೂರ, ಶಂಕರಗೌಡ ಪಾಟೀಲ, ಜಿಲ್ಲಾ ಸಹಕಾರಿ ಯೂನಿಯನ್‌ನ ನಿರ್ದೇಶಕರುಗಳು ಸೇರಿದಂತೆ ಹಲವು ಮುಖಂಡರುಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button