*ಸ್ಟಿಂಗ್ ಆಪರೇಷನ್ ಸತ್ಯ ಹೊರಬರಲಿ, ಸರ್ಕಾರವೇ ಸುಮೋಟೋ ಕೇಸ್ ದಾಖಲಿಸಲಿ*: *ಛಲವಾದಿ ನಾರಾಯಣಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಬಿಜೆಪಿ ನಾಯಕರು ದೂರು ನೀಡಲಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಮೊದಲು ಕಾನೂನು ತಿಳಿದುಕೊಳ್ಳಲಿ ಎಂದು ಹೇಳಿರುವ ಅವರು, ಸರ್ಕಾರವೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ತನಿಖೆ ನಡೆಸಲು ದೂರು ನೀಡಲೇಬೇಕು ಎಂಬ ನಿಯಮವಿಲ್ಲ. ಪ್ರಕರಣದಲ್ಲಿ ಅನುಮಾನಗಳಿದ್ದರೆ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬಹುದು ಎಂದು ಹೇಳಿದ್ದಾರೆ.
ಅನ್ಯ ಮಾರ್ಗಗಳನ್ನು ಅನುಸರಿಸದವರು ತನಿಖೆಗೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ನಡೆದುಕೊಳ್ಳುತ್ತಿರುವ ರೀತಿಯನ್ನು ಟೀಕಿಸಿದ್ದಾರೆ. ಕುಂಬಳಕಾಯಿ ಕಳ್ಳರಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ, ತನಿಖೆ ನಡೆಸಬೇಕಾದ ಮುಖ್ಯಮಂತ್ರಿಗಳೇ ಈ ವಿಚಾರವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಸ್ಟಿಂಗ್ ಆಪರೇಷನ್ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಸರ್ಕಾರವೇ ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




