ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ128ಕ್ಕೆ ಏರಿಕೆ
ಪ್ರಗತಿವಾಹಿನಿ ಸುದ್ದಿ: ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ 46 ರಿಂದ 128 ಏರಿಕೆಯಾಗಿದೆ.
ಹೂಲಿಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ದೇವಿ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶೀಕರಣಿಯನ್ನು ಇವರು ಸೇವಿಸಿದ್ದರು. ಜಾತ್ರೆಯಲ್ಲಿ ಪ್ರಸಾದ ಬದಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವ ಸಂಶಯ ವ್ಯಕ್ತವಾಗಿದೆ.
ಬುಧವಾರ ಬೆಳಗ್ಗೆ ಪ್ರಸಾದ ಸೇವಿಸಿದ ಜನರಲ್ಲಿ ಬುಧವಾರ ಏಕಾಏಕಿ ವಾಂತಿ, ಭೇದಿ ಶುರುವಾಗಿತ್ತು. ಕೂಡಲೇ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಹೂಲಿಕಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯವನ್ನೂ ತಾಲೂಕು ವೈದ್ಯರು ತಪಾಸಣೆ ಮಾಡುತ್ತಿದ್ದಾರೆ. ಸ್ಥಳಕ್ಕೆ ಡಿಎಚ್‌ಒ ಮಹೇಶ್ ಕೋಣಿ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿನ ಕುಡಿಯುವ ನೀರನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಶಾಸಕ ವಿಶ್ವಾಸ್ ವೈದ್ಯ ಕೂಡ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ