Belagavi NewsBelgaum NewsKannada NewsKarnataka NewsNationalPolitics

*ಜಿಲ್ಲೆಯಲ್ಲಿ ಸೆ.15 ರಂದು 145 ಕಿಮೀ ಮಾನವ ಸರಪಳಿ; ಮಾರ್ಗ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ ಸೆ.15ರಂದು ಜಿಲ್ಲೆಯಲ್ಲಿ ನಡೆಯಲಿರುವ 145 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ ಅವರೊಂದಿಗೆ ಮಾನವ ಸರಪಳಿಯ ಮಾರ್ಗವನ್ನು ಶುಕ್ರವಾರ(ಸೆ.13) ಪರಿಶೀಲಿಸಿದರು.

ಸುರಕ್ಷತೆ, ಸುಗಮ ಸಾರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಅನಾನುಕೂಲವಾಗದಂತೆ ಸರಕಾರದ ನಿರ್ದೇಶನಗಳ ಪ್ರಕಾರ ನಿಗದಿತ ಸಮಯದಲ್ಲಿ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಯುವ ಸಮುದಾಯ, ಸಂಘ-ಸಂಸ್ಥೆಗಳ ಸದಸ್ಯರು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಮಾನವ ಸರಪಳಿ ನಿರ್ಮಾಣಕ್ಕೆ ಅನುಕೂಲವಾಗುವಂತೆ‌ ಸೂಕ್ತ ಭದ್ರತೆ ಮತ್ತು ಪಾರ್ಕಿಂಗ್ ಸ್ಥಳ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ ವಿವರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ತಾವು ನಿಲ್ಲಬೇಕಾದ ಸ್ಥಳ ಮತ್ತಿತರ ವಿಷಯಗಳ ಕುರಿತು ಮಾರ್ಗದರ್ಶನ ನೀಡುವುದಕ್ಕೆ ಸಂಬಂಧಿಸಿದಂತೆ ಫಲಕ ಅಳವಡಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ತಿಳಿಸಿದರು.

ಯರಗಟ್ಟಿ, ಹಲಕಿ ಕ್ರಾಸ್, ಇಂಚಲ ಕ್ರಾಸ್, ಕರಡಿಗುದ್ದಿ, ಸಾಲಾಪುರ ಕ್ರಾಸ್ ಹಾಗೂ ಬೆಳಗಾವಿ ಮತ್ತಿತರ ಕಡೆ ಭೇಟಿ  ನೀಡಿದ ಜಿಲ್ಲಾಧಿಕಾರಿಗಳು, ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಸಲಹೆ-ಸೂಚನೆಗಳನ್ನು ನೀಡಿದರು.

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಚನ್ಮಮ್ಮನ‌ ಕಿತ್ತೂರಿನವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ದಿನೇಶ್ ಕುಮಾರ್, ಆಯಾ ತಾಲ್ಲೂಕಿನ ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button