*ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ಯೋಜನೆ: ಸಚಿವ ಎಚ್.ಕೆ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ವಿಧಾನಪರಿಷತ್‌ನಲ್ಲಿ ಇಂದು ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ ವಿಧೇಯಕದ ಮೇಲೆ ಮಾತನಾಡಿದ ಅವರು, ಅತ್ಯಂತ ಪ್ರಮುಖ ಪ್ರವಾಸೋದ್ಯಮ ತಾಣವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದಲೂ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಬರುವ ಭಕ್ತಾದಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು 230 ಕೋಟಿ ರೂ. ಯೋಜನೆಯನ್ನು ರೂಪಿಸಿದ್ದೇವೆ ಎಂದು ಹೇಳಿದರು.
ಸವದತ್ತಿ ಯಲ್ಲಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿದ್ದೇವೆ. 2026 ರ ಡಿಸೆಂಬರ್‌ನಲ್ಲಿ ಯೋಜನೆ ಪೂರ್ಣಗೊಳ್ಳಲಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ಕೂಡ ರಚಿಸಲಾಗಿದೆ. ಶೀಘ್ರದಲ್ಲೇ ಟೆಂಡರ್ ಕರೆಯುವುದಾಗಿ ಪಾಟೀಲ್ ಪರಿಷತ್‌ಗೆ ತಿಳಿಸಿದರು.