ವಿದ್ಯುತ್ ದುರಂತಕ್ಕೆ 3 ಸಾವು: ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ತಲಾ 2 ಲಕ್ಷ ರೂ.ಪರಿಹಾರ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಸಹ ಆರ್ಥಿಕ ಸಹಾಯ ಮಾಡಿದರು.

ವಿದ್ಯುತ್ ಶಾಕ್ ನಿಂದ ಇಲ್ಲಿನ ಶಾಹುನಗರದ ಮನೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಅವಘಡ ನಡೆದಿದ್ದು ಅಜ್ಜ, ಅಜ್ಜಿ, ಮೊಮ್ಮಗಳು ಸೇರಿ ಮೂವರು ಮೃತಪಟ್ಟಿದ್ದಾರೆ. ವಾಚಮನ್ ಕೆಲಸ ಮಾಡುತ್ತಿದ್ದ ಈರಪ್ಪಾ ಲಮಾಣಿ (50), ಶಾಂತವ್ವ ಲಮಾಣಿ (45) ಹಾಗೂ ಇವರ ಮೊಮ್ಮಗಳು ಅನ್ನಪೂರ್ಣ ಲಮಾಣಿ ( 8) ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಲಕ್ಷ್ಮೀ ಹೆಬ್ಬಾಳಕರ್, ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯವನ್ನು ತುಂಬಿದರು. ಜತೆಗೆ ಮುಖ್ಯಮಂತ್ರಿಗಳಿಗೆ ಸ್ಥಳದಿಂದಲೇ ಕರೆ ಮಾಡಿ ಈ ಘಟನೆಯ ಬಗ್ಗೆ ವಿವರಿಸಿ, ಪ್ರತಿ ವ್ಯಕ್ತಿಗೆ ತಲಾ 2 ಲಕ್ಷ ರೂ,ಗಳನ್ನು ಮಂಜೂರು ಮಾಡಿ ಕೊಡುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ತ್ವರಿತಗತಿಯಲ್ಲಿ ಪರಿಹಾರದ ಹಣ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದ್ದಾರೆ. ಇದಲ್ಲದೆ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಸಹ ಆರ್ಥಿಕ ಸಹಾಯ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ