ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಆ ಭಾಗದ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಮಾಜಿ ಸಚಿವ, ಹಾಲಿ ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಅವರ ಹೆಸರನ್ನು ಹೈಕಮಾಂಡ್ ಗೆ ಕಳಿಸಲು ಅಂತಿಮಗೊಳಿಸಲಾಗಿದೆ.
ಜೊತೆಗೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಸಹ ಚರ್ಚೆ ನಡೆದಿದೆ.
ಹಿರಿಯ ಮುಖಂಡ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಎಂ.ಬಿ. ಪಾಟೀಲ್, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ