Latest

*4ಡಿ ಮಕ್ಕಳ ಉಚಿತ ಶಸ್ತ್ರಚಿಕಿತ್ಸೆಗೆ ಕ್ರಮವಹಿಸಿ: ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ (ಆರ್.ಬಿ.ಎಸ್.ಕೆ.) ಗುರುತಿಸಿರುವ ಶಸ್ತ್ರಚಿಕಿತ್ಸೆ ಅಗತ್ಯವಿರುವ 4ಡಿ ಮಕ್ಕಳಿಗೆ (Disease, Defect, Delay Development and Deficiency) ಉಚಿತವಾಗಿ ಶಸ್ತ್ರಚಿಕಿತ್ಸೆ ಕೈಗೊಳ್ಳಲು ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಸ್ತ್ರಚಿಕಿತ್ಸೆ ಅಗತ್ಯವಿರುವ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಅವರಿಗೆ ಅಗತ್ಯ ನೆರವು ಹಾಗೂ ಸಹಕಾರ ನೀಡಬೇಕು. ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ಮಾಹಿತಿ ನೀಡಿ, ತ್ವರಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲು ಕ್ರಮವಹಿಸಬೇಕು ಎಂದರು.

ಅಪೌಷ್ಠಿಕ ಮಕ್ಕಳಿಗೆ ಸಂಬಂಧಪಟ್ಟ ತಾಲೂಕಾ ಆಸ್ಪತ್ರೆಯ ಎನ್.ಆರ್.ಸಿ. ಗಳಲ್ಲಿ ಅಗತ್ಯ ಚಿಕಿತ್ಸೆ ಕೊಡಿಸಬೇಕು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಅಂಗನವಾಡಿ ಮಕ್ಕಳು ಹಾಗೂ ಶಾಲಾ, ಕಾಲೇಜು ಮಕ್ಕಳ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

Home add -Advt

ಅಂಗನವಾಡಿಗಳ ಮೂಲಸೌಕರ್ಯ ಪರಿಶೀಲಿಸಿ

ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ ಇರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಅಗತ್ಯ ಕ್ರಮಕೈಗೊಳ್ಳಬೇಕು. ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪದಾರ್ಥಗಳ ಪೂರೈಕೆ ಮಾಡಬೇಕು. ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ನಿಗಾ ವಹಿಸುವಂತೆ ಅಂಗನವಾಡಿ ಮೇಲ್ವಿಚಾರಕಿಯರಿಗೆ ಸೂಚಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರಗತಿಯಲ್ಲಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಸುಸಜ್ಜಿತ ಕಟ್ಟಡ ನಿರ್ಮಿಸಬೇಕು. ಸಂಬಂಧಪಟ್ಟ ಇಲಾಖೆಯವರು ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ನಿಯಮಾನುಸಾರ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ಸೂಚನೆ ನೀಡಿದರು. 

ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ:

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸಖಿ ಒನ್ ಸ್ಟಾಪ್, ದೇವದಾಸಿ ಪುನರ್ವಸತಿ, ಮಿಷನ್ ಶಕ್ತಿ ಯೋಜನೆ ಸೇರಿ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದು, ಪ್ರಗತಿ ಸಾಧಿಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಮ್.ಎನ್. ಚೇತನಕುಮಾರ, ಪಂಚಾಯತರಾಜ್ ಇಂಜಿನಿಯರಿಂಗ್ ಬೆಳಗಾವಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಸುಂದರ ಕೋಳಿ, ಚಿಕ್ಕೋಡಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಪ್ರವೀಣ ಮಠಪತಿ, ಜಿಲ್ಲಾ ಅಂಗವಿಕಲ ಇಲಾಖೆಯ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ಸೇರಿದಂತೆ ಎಲ್ಲ ತಾಲೂಕುಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.

Related Articles

Back to top button