ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಪ್ರತ್ಯೇಕ ರೇಷನ್ ಕಾರ್ಡ ಮತ್ತು ಆಧಾರ್ ಕಾರ್ಡಗಳನ್ನು ಹೊಂದಿ ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವ ಕುಟುಂಬಗಳನ್ನು ಪ್ರತ್ಯೇಕ ಘಟಕವೆಂದು ಪರಿಗಣಿಸಿ ಅವರಿಗೂ ನಿವೇಶನ ಅಥವಾ ಮನೆಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು; ವಾಸಕ್ಕೆ ಯೋಗ್ಯವಲ್ಲದ ಮನೆಗಳನ್ನು ಎ ಕೆಟಗರಿ ಎಂದು ಪರಿಗಣಿಸಿ ಐದು ಲಕ್ಷ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಅ.3) ನಡೆದ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದೇ ದೊಡ್ಡ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವ ಸಹೋದರರ ಕುಟುಂಬಗಳನ್ನು ಪ್ರತ್ಯೇಕ ಘಟಕ ಎಂದು ಪರಿಗಣಿಸಬೇಕು ಎಂದು ಸವದತ್ತಿ ಶಾಸಕ ಆನಂದ ಮಾಮನಿ ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಇಂತಹ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ವಾಸಿಸುವ ಕುಟುಂಬಗಳನ್ನು ಗುರುತಿಸಿ, ಕೂಡಲೇ ಅವರಿಗೂ ಎಲ್ಲ ರೀತಿಯ ಪರಿಹಾರವನ್ನು ಒದಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕರು ತಮ್ಮ ಕ್ಷೇತ್ರದಲ್ಲಿ ಬಿದ್ದ ಮನೆಗಳ ವರ್ಗೀಕರಣದಲ್ಲಿ ಏನಾದರೂ ಲೋಪದೋಷಗಳಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸರಿಪಡಿಸಬೇಕು; ಅಂತಹ ಕುಟುಂಬಗಳಿಗೂ ಎಲ್ಲ ರೀತಿಯ ಪರಿಹಾರ ನೀಡಲಾಗುವುದು ಎಂದು ಶಾಸಕರಿಗೆ ತಿಳಿಸಿದರು.
ಯಾವುದೇ ಪಕ್ಷವಿರಲಿ ಶಾಸಕರು ಪಟ್ಟಿ ನೀಡಿದರೆ ಮನೆಗಳ ವರ್ಗೀಕರಣವನ್ನು ಪರಿಷ್ಕರಣೆ ಮಾಡಿ ಪರಿಹಾರ ನೀಡಲಾಗುವುದು.
ಮನೆಹಾನಿ ವರ್ಗೀಕರಣ-ಅಧಿಕಾರಿಗಳಿಗೆ ಎಚ್ಚರಿಕೆ:
ಮನೆಗಳ ಹಾನಿಯನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ವರ್ಗೀಕರಣದಲ್ಲಿ ಲೋಪವೆಸಗಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ಕುಸಿದಿರುವ ಮನೆಗಳ ಎ,ಬಿ ಮತ್ತು ಸಿ ವರ್ಗೀಕರಣ ಸಮರ್ಪಕವಾಗಿ ಆಗುತ್ತಿಲ್ಲ; ಸಾಧ್ಯವಾದರೆ ಮರು ಮೌಲ್ಯಮಾಪನ ಮಾಡಿ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಎ ಮತ್ತು ಬಿ ಕೆಟಗರಿ ಮಾತ್ರ ಪರಿಗಣಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದರು.
10 ಸಾವಿರ ಕೋಟಿಯಷ್ಟು ಹಾನಿಯಾಗಿದೆ. ಈಗ 867 ಕೋಟಿ ರೂ. ಪರಿಹಾರ ನೀಡಲಾಗಿದೆ. 10 ಸಾವಿರ ಕೋಟಿ ಎಲ್ಲಿ? 867 ಕೋಟಿ ಎಲ್ಲಿ ಎಂದು ಲಕ್ಷ್ಮಿ ಹೆಬ್ಬಾಳಕರ್ ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ಮಾತ್ರ ಪರಿಹಾರ ನೀಡಲು ಸಾಧ್ಯ ಎಂದರು.
ಆದಾಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ನೆರವು ನೀಡಲಾಗುವುದು ಎಂದರು.
ಶಾಸಕ ಆನಂದ ಮಾಮನಿ ಅವರು, ನೇಕಾರರ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಕೈಮಗ್ಗಗಳಿಗೆ ಮಾತ್ರ ಪರಿಹಾರ ನೀಡಲಾಗುತ್ತಿದ್ದು, ಅದೇ ರೀತಿ ವಿದ್ಯುತ್ ಮಗ್ಗಗಳಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಹಾಳಾಗಿರುವ ವಿದ್ಯುತ್ ಮಗ್ಗಗಳಿಗೂ 25 ಸಾವಿರ ರೂಪಾಯಿಗಳಂತೆ ಪರಿಹಾರವನ್ನು ನೀಡಬೇಕು ಎಂದು ಸೂಚನೆ ನೀಡಿದರು.
ಶಾಸಕ ಅಭಯ್ ಪಾಟೀಲ ಮಾತನಾಡಿ, ಪ್ರವಾಹದಿಂದ ಬೆಳಗಾವಿ ನಗರದಲ್ಲಿ ರಸ್ತೆ ಮತ್ತಿತರ ಸೌಕರ್ಯಗಳು ಹಾಳಾಗಿದ್ದು, ತಕ್ಷಣ ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಂಡರು.
ಶಾಲಾ ಕೊಠಡಿ ನಿರ್ಮಾಣಕ್ಕೆ ಐದು ಲಕ್ಷ:
ಪ್ರವಾಹದಿಂದ ಶಿಥಿಲಗೊಂಡಿರುವ ಶಾಲೆಗಳ ಪ್ರತಿಯೊಂದು ಕೊಠಡಿ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಅದೇ ರೀತಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೂ ಪ್ರತ್ಯೇಕ ಅನುದಾನ ಒದಗಿಸಲಾಗುತ್ತದೆ. ಕೂಡಲೇ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಅದೇ ರೀತಿ ದುರಸ್ತಿ ಸಾಧ್ಯವಿರುವ ಕಟ್ಟಡಗಳ ದುರಸ್ತಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆಯನ್ನು ನೀಡಿದರು.
ವಿದ್ಯುತ್ ಸಂಪರ್ಕವನ್ನು ಒಂದು ವಾರದಲ್ಲಿ ಸರಿಪಡಿಸಬೇಕು. ಮುಂದಿನ ಸಲ ಭೇಟಿ ನೀಡಿದಾಗ ವಿದ್ಯುತ್ ಸಂಪರ್ಕದ ಬಗ್ಗೆ ಯಾವುದೇ ದೂರುಗಳು ಬರಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬೆಳೆಹಾನಿ ಪರಿಹಾರವನ್ನು ಇನ್ನು ಕೆಲ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಪ್ರವಾಹ ಮತ್ತು ಅತಿವೃಷ್ಟಿಯಿಂದ ಜಮೀನು ಹಾಳಾಗಿದ್ದರೆ ಅಂತಹ ಕೆಲಸಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಳ್ಳುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಗೋಕಾಕ ಮತ್ತು ರಾಮದುರ್ಗ ತಾಲ್ಲೂಕಿನಲ್ಲಿ ಮಾತ್ರ ಪರಿಹಾರ ಕೇಂದ್ರಗಳು ಇನ್ನೂ ಚಾಲ್ತಿಯಲ್ಲಿವೆ. ಮನೆಗಳಿಗೆ ತೆರಳಿರುವ 1.08 ಲಕ್ಷ ಸಂತ್ರಸ್ತ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 69381 ಮನೆಗಳಿಗೆ ಹಾನಿಯಾಗಿದ್ದು, 57 ಸಾವಿರ ಮನೆಗಳ ಸಂಪೂರ್ಣ ಮಾಹಿತಿಯನ್ನು ರಾಜೀವ ಗಾಂಧಿ ವಸತಿ ನಿಗಮದ ವೆಬ್ ಸೈಟ್ ನಲ್ಲಿ ಅಳವಡಿಸಲಾಗಿದೆ.
ವಾರಸಾ ಮತ್ತಿತರ ತಾಂತ್ರಿಕ ಕಾರಣಗಳಿಂದಾಗಿ ಉಳಿದ ಮನೆಗಳ ವಿವರ ಸಲ್ಲಿಸುವುದು ಸಾಧ್ಯವಾಗಿಳ್. ಅವುಗಳನ್ನು ದಾಖಲಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಕಳಸದ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ