*ಕನ್ನಡ ಕಡ್ಡಾಯ: ಶೀಘ್ರವೇ ಗಡಿಜಿಲ್ಲೆ ಹಾಗೂ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲಿ ಸಭೆಗೆ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರೆತ ಕೂಡಲೇ ವಿಶೇಷವಾಗಿ ಬೆಂಗಳೂರಿನ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿ ಬಳಸುವ ಸಂಬಂದ ಕ್ರಮಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾ ಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸೂಚಿಸಿದ್ದಾರೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಗೆ ಸಂಬಂಧಿಸಿದಂತೆ ಸಚಿವರು ಗುರುವಾರ ವಿಧಾನಸೌಧದಲ್ಲಿ ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ನಾಮಫಲಕ ಅಳವಡಿಕೆ ಸಂಬಂಧ ವಾರ್ಡ್ ವಾರು ಕ್ರಮಕೈಗೊಳ್ಳಲಾಗಿದ್ದು, ಈಗಾಗಲೇ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ ಅವರು ಸಚಿವರ ಗಮನಕ್ಕೆ ತಂದರು.
ಸಚಿವ ಶಿವರಾಜ್ ತಂಗಡಗಿ ಅವರು, ಶೀಘ್ರವೇ ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುವುದು. ಈ ವಿಚಾರದಲ್ಲಿ ಅಧಿಕಾರಿಗಳು ಗಂಭೀರವಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.
ಅಲ್ಲದೆ, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಸಂಬಂಧ ಗಡಿ ಜಿಲ್ಲೆ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್, ಪಾಲಿಕೆ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕರಾದ ಬನಶಂಕರಿ ಅಂಗಡಿ, ಬಲವಂತರಾಯ ಪಾಟೀಲ್, ಸಚಿವರ ಆಪ್ತ ಕಾರ್ಯದರ್ಶಿ ಮಧುಸೂದನ್ ರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ