ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಶನಿವಾರ ನಡೆಯುತ್ತಿದ್ದು, ಮುಂಜಾನೆ ಏಳು ಗಂಟೆಯಿಂದಲೇ ಮತದಾರರು ಸರದಿಯಲ್ಲಿ ನಿಂತು ಮತ ಚಲಾಯಿಸಲು ಪ್ರಾರಂಭಿಸಿದ್ದಾರೆ.
ಎಂಟು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಉತ್ತರ ಪ್ರದೇಶದ 14 ಸ್ಥಾನ, ಪ. ಬಂಗಾಳದ 8 ಕ್ಷೇತ್ರ, ಬಿಹಾರದ 8, ಒಡಿಶಾದ 6 ಮತ್ತು ಜಾರ್ಖಂಡ್ ನ 4 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.
ನಾಯಕರಿಂದ ಮತದಾನ
ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವು ರಾಜಕೀಯ ನಾಯಕರು ಮತದಾನ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ಪ್ರೆಸಿಡೆಂಟ್ಸ್ ಎಸ್ಟೇಟ್‍ನಲ್ಲಿರುವ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಪತ್ನಿ ಸುದೇಶ ಧನ್ಕರ್ ಜೊತೆ ಆಗಮಿಸಿ ದೆಹಲಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ದೆಹಲಿಯ ಮೌಲಾನಾ ಆಕಾದ್ ರಸ್ತೆಯಲ್ಲಿರುವ ನಿರ್ಮಾಣ್ ಭವನದ ಮತಗಟ್ಟೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಮತ ಚಲಾಯಿಸಿದರು. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಭುವನೇಶ್ವರದಲ್ಲಿ ಮತದಾನ ಮಾಡಿದರು.
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಕ್ಕಳಾದ ರೈಹಾನ್ ರಾಜೀವ್ ವಾದ್ರಾ ಮತ್ತು ಮಿರಾಯಾ ವಾದ್ರಾ ಮೊದಲ ಬಾರಿ ತಮ್ಮ ಹಕ್ಕು ಚಲಾಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ