Kannada NewsKarnataka NewsLatest

*ವಾರದೊಳಗೆ ಮೊದಲ ಕಂತಿನ ಬೆಳೆ ಪರಿಹಾರ ರೈತರ ಖಾತೆಗೆ; ಸಿಎಂ ಘೋಷಣೆ*

ಮಧ್ಯಮಾವಧಿ, ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ

ಪ್ರಗತಿವಾಹಿನಿ ಸುದ್ದಿ: ಈ ಬಾರಿ ಹವಾಮಾನ ವೈಪರೀತ್ಯ, ಮಳೆಯ ತೀವ್ರ ಕೊರತೆಯಿಂದಾಗಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ.
ರಾಜ್ಯ ಸರ್ಕಾರವೇ ಬರದಿಂದ ಬಾಧಿತರಾದವರಿಗೆ ಬೆಳೆ ಪರಿಹಾರವಾಗಿ 2000 ರೂ.ಗಳ ವರೆಗಿನ ತಾತ್ಕಾಲಿಕ ಪರಿಹಾರದ ಘೋಷಣೆಯನ್ನು ಮಾಡಿದ್ದು, ಈವರೆಗೆ 550 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಪರಿಹಾರ ರೈತರಿಗೆ ತಲುಪಿಸಲಾಗುವ ವ್ಯವಸ್ಥೆಯಾಗುತ್ತಿದೆ ಎಂದು ತಿಳಿಸಿದರು.

ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲು ಪಾವತಿಸಿದಲ್ಲಿ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ಆದೇಶ ಹೊರಡಿಸಿದೆ.

ಕೊಬ್ಬರಿ ಬೆಲೆ ಕುಸಿತಗೊಂಡು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1500 ರೂಗಳ ನೆರವನ್ನು ರಾಜ್ಯ ಸರ್ಕಾರವೆ ನೀಡುತ್ತಿದೆ.

ನೆಟೆ ರೋಗದಿಂದ ಬಾಧಿತರಾದ ತೊಗರಿ ಬೆಳೆಗಾರರಿಗೆ 223 ಕೋಟಿ ರೂ ಪರಿಹಾರ ನೀಡಿದ್ದೇವೆ.

ಬಿತ್ತನೆ ವೈಫಲ್ಯ, ಮಧ್ಯಂತರ ಬೆಳೆ ಪರಿಹಾರ ವಿಮೆ ಮತ್ತು ಸ್ಥಳ ನಿರ್ಧಿಷ್ಠ ವಿಕೋಪಗಳಿಗೆ ಪರಿಹಾರವಾಗಿ 8.10 ಲಕ್ಷ ರೈತರಿಗೆ 591 ಕೋಟಿ ರೂಪಾಯಿಗಳನ್ನು ನೀಡಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿ ಮಾಡಲಾಗಿದೆ ಎಂದು ವಿವರಿಸಿದರು.

ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ ಎಂದು ಡಾ: ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಮಹತ್ವವನ್ನು ನೀಡಿದೆ. ಮಕ್ಕಳಲ್ಲಿ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಗುಣಗಳನ್ನು ಬೆಳೆಸುವ ರೀತಿಯಲ್ಲಿ ಪಠ್ಯಪುಸ್ತಕಗಳನ್ನು ರೂಪಿಸುತ್ತಿದ್ದೇವೆ. ಇದಲ್ಲದೆ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಸ್ಥಳೀಯ ಅವಶ್ಯಕತೆಗಳಿಗೆ ತಕ್ಕಂತೆ ಸುಧಾರಣೆಗೆ ಒಳಪಡಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದೆ

ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗುವ ಶಾಲಾ ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ಮನದಟ್ಟು ಮಾಡಿಸುವ ಉದ್ದೇಶದಿಂದ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಲಾಗಿದೆ. ತನ್ಮೂಲಕ ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಚಯಿಸುವ ಗುರಿ ನಮ್ಮದು ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button