Kannada NewsKarnataka NewsLatestPolitics

*7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಸಿಎಂ ಮಹತ್ವದ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಆಡಳಿತ ಸುಧಾರಣೆ ಒಂದು ನಿರಂತರ ಪ್ರಕ್ರಿಯೆಯಾಗಿದೆ. ಆಡಳಿತ ಸುಧಾರಣಾ ಆಯೋಗ-2 ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೈಗೊಳ್ಳಬಹುದಾದ ಸುಧಾರಣಾ ಕ್ರಮಗಳ ಬಗ್ಗೆ ಸಲ್ಲಿಸಿರುವ ವರದಿಗಳನ್ನು ಪರಿಶೀಲಿಸಿ, ಅವುಗಳ ಅನುಷ್ಠಾನದ ಕುರಿತು ಪರಿಶೀಲಿಸಲು ಸರ್ಕಾರ ಆಡಳಿತ ಸುಧಾರಣಾ ಆಯೋಗವನ್ನು ರಚಿಸಿದೆ. ಈ ಆಯೋಗವು ಆಡಳಿತ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.

ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ. ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲುಗಳನ್ನೂ ಸಹ ನಿಗದಿತ ಕಾಲಮಿತಿಯಲ್ಲಿ ಬಗೆಹರಿಸಲಾಗುವುದು ಎಂದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button