Kannada NewsKarnataka NewsPolitics

* ಮತ್ತೊಂದು ಇಲಾಖೆಯಲ್ಲಿ 800 ಕೋಟಿ ರೂ ಬೃಹತ್​​​ ಹಗರಣ: ಹೊಸ ಬಾಂಬ್ ಸಿಡಿಸಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕ ಇಲಾಖೆಯಲ್ಲಿ ಬರೋಬ್ಬರಿ 800 ಕೋಟಿ ರೂಪಾಯಿ ಹಗರಣ ನಡೆದಿದೆ. ಆರೋಗ್ಯ ತಪಾಸಣೆ ಹೆಸರಲ್ಲಿ ಲೂಟಿ ಮಾಡಲಾಗಿದೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ, ಇಲಾಖೆಯಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 3 ವರ್ಷಗಳಲ್ಲಿ 800 ಕೋಟಿ ರೂ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ನೂರಾರು ಕೋಟಿ ಹಣ ದೆಹಲಿ, ಕೇರಳಕ್ಕೆ ವರ್ಗಾವಣೆ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ 27,13,000 ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಒಬ್ಬ ಕಾರ್ಮಿಕನ ಆರೋಗ್ಯ ತಪಾಸಣೆಗೆ 2,950 ರೂಪಾಯಿ ವೆಚ್ಚವಾಗಿದೆ. ಆ ಮೂಲಕ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 3 ವರ್ಷದಲ್ಲಿ 800 ಕೋಟಿ ರೂ ಹಣ ಲೂಟಿ ಆಗಿದೆ. ಎಂಟು ಏಜೆನ್ಸಿಗಳ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದರು.

ಹಗರಣದ ಬಗ್ಗೆ ತನಿಖೆಗೆ ಆದೇಶ ನೀಡಬೇಕು. ಪ್ರಕರಣವನ್ನು ಸಿಬಿಐ ಅಥವಾ ಇ.ಡಿ ತನಿಖೆ ನಡೆಸಬೇಕು ಹಗರಣದಲ್ಲಿ ಐಎಎಸ್​ ಅಧಿಕಾರಿಗಳು ಸೇರಿ ಎಲ್ಲರೂ ಭಾಗಿಯಾಗಿದ್ದಾರೆ. ಈ ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಹಗರಣದ ಬಗ್ಗೆ ಕಾರ್ಮಿಕ ಸಚಿವ ಸಂತೋಷ್​ ಲಾಡ್​ಗೆ ಈಗಾಗಲೇ ದೂರು ನೀಡಲಾಗಿದೆ. ಆದರೆ ಸಚಿವರು ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ನೈತಿಕ ಹೊಣೆಹೊತ್ತು ಸಂತೋಷ್ ಲಾಡ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button