*80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 80ನೇ ಸ್ವಾತಂತ್ರ್ಯೋತ್ಸವದ ಸಡಗರ-ಸಂಭ್ರಮ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವದ ಸಡಗರ ಮನೆಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ್ದು, ಕೆಂಪುಕೋಟೆಯಲ್ಲಿ ದ್ವಜಾರೋಹಣ ನೆರವೇರಿಸಿದ್ದಾರೆ.
ಈ ಬಾರಿ ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಸಂಪೂರ್ಣ ಗೀತೆ ಹಾಡಲಾಯಿತು. ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಳೆದ 12 ವರ್ಷಗಳಲ್ಲಿ ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಸಂಪೂರ್ಣವಾಗಿ ಬದಲಾಗಿದೆ. ಹಾಗಾಗಿ ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಅಭಿಯಾನವನ್ನು ಬಲಪಡಿಸುವುದು ಹಾಗೂ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸುವುದು ಅತ್ಯಂತ ಮುಖ್ಯ.
ಭಾರತದ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ದೇಶವನ್ನ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಸಾಧಿಸಲೇಬೇಕು. ಈ ಗುರಿಯನ್ನು ನಾವು ಸಾಧಿಸಲೇಬೇಕು. 140 ಕೋಟಿ ಭಾರತೀಯರೂ ಇದಕ್ಕಾಗಿ ಶ್ರಮಿಸಬೇಕು. ವಿಶ್ವದ ಅತಿದೊಡ್ಡ ಜನಸಂಖ್ಯೆಯ ರಾಷ್ಟ್ರವೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಕೈಗೊಂಡಾಗ, ಅದು ನಮ್ಮ ಧೈರ್ಯಕ್ಕೆ ಸಾಕ್ಷಿಯಾಗುತ್ತದೆ. ಆಗ ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನವೂ ಬದಲಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು ಹಾಗೂ ತ್ರಿವಿಧ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದರು.


