
ಪ್ರಗತಿವಾಹಿನಿ ಸುದ್ದಿ: 9 ನೇ ತರಗತಿಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಖಾಸಗಿ ಶಾಲೆಯ ಬಳಿಯ ಜಮೀನಿನ ಪಕ್ಕದಲ್ಲೇ ಮರದ ಕೆಳಗೆ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಮಡಿವಾಳಪ್ಪ ಚಬನೂರ (15) ಮೃತ ವಿದ್ಯಾರ್ಥಿ. ಬೋರಗಿ ಗ್ರಾಮದ ನಿವಾಸಿ.
ಮಡಿವಾಳಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಾಲೆಯ ಆಡಳಿತ ಮಂಡಳಿಯವರು ಪೋಷಕರಿಗೆ ತಿಳಿಸಿದ್ದಾರೆ. ಆದರೆ ಪೋಷಕರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ವಿದ್ಯಾರ್ಥಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.