ಪ್ರಗತಿವಾಹಿನಿ ಸುದ್ದಿ, ಮೂಡಲಗಿ :
ತಾಲೂಕಿನಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ತಲೆದೋರದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿಯ ಶಿವಬೋಧರಂಗ ಬ್ಯಾಂಕಿನ ಸಭಾ ಗೃಹದಲ್ಲಿ ಶನಿವಾರದಂದು ಮೂಡಲಗಿ ತಾಲೂಕಾ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಯಾವ ಸಮಸ್ಯೆಗಳು ಉದ್ಭವವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮ ಪಂಚಾಯತ ಮಟ್ಟದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ನೀಗಿಸಲು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಟ್ಟು ಕರ್ತವ್ಯ ನಿರ್ವಹಿಸಬೇಕು. ಒಂದು ವೇಳೆ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಶಾಸಕರು ನೀಡಿದರು.
ತಾಲೂಕಿನ ತಿಗಡಿ ಗ್ರಾಮದಲ್ಲಿ ರೇಷ್ಮೆ ಇಲಾಖೆ ಕಟ್ಟಡದಲ್ಲಿ ಮೇವು ಬ್ಯಾಂಕ್ನ್ನು ತೆರೆದಿದ್ದು, ಮೇವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಈಗ ಮೇವಿನ ಸಮಸ್ಯೆ ರೈತರಿಗಿಲ್ಲ. ಬೆಳಗಾವಿಯಿಂದ ಮೂಡಲಗಿಗೆ ಸ್ಥಳಾಂತರಗೊಂಡಿರುವ ಪಶು ವೈದ್ಯಕೀಯ ಪಾಲಿಕ್ಲಿನಿಕ್ ಆರಂಭಕ್ಕೆ ಮೂಡಲಗಿಯಲ್ಲಿ ಕಟ್ಟಡ ಲಭ್ಯವಿದೆ. ಆದರೆ ಸಿಬ್ಬಂದಿ ಕೊರತೆ ಇರುವದರಿಂದ, ಶೀಘ್ರದಲ್ಲಿಯೇ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ಮೂಡಲಗಿಯಲ್ಲಿ ಪಶು ವೈದ್ಯಕೀಯ ಪಾಲಿ ಕ್ಲಿನಿಕ್ ಆರಂಭಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು.
ರೋಗಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ದೊರಕಿಸಿಕೊಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು. ಆಸ್ಪತ್ರೆಗಳಲ್ಲಿ ವೈದ್ಯರ ಸಮಸ್ಯೆ ಎದುರಾಗದಂತೆ ಮುಖ್ಯ ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ರೋಗಿಗಳ ಸೇವೆಯನ್ನು ಮಾಡುವಂತೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ವಿತರಿಸಬೇಕು. ಅಲ್ಲದೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸಗಳನ್ನು ಓಡಿಸಬೇಕು. ವಿನಂತಿ ಮೇರೆಗೆ ಬಸ್ಸಗಳನ್ನು ನಿಲುಗಡೆ ಮಾಡುವಂತೆ ಸೂಚಿಸಿದರು.
ಮೂಡಲಗಿ ಪಟ್ಟಣದಲ್ಲಿ ಉಪನೋಂದಣಾಧಿಕಾರಿ ಕಛೇರಿ ಆರಂಭಕ್ಕೆ ಈಗಾಗಲೇ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಮೂಡಲಗಿಯಲ್ಲಿ ಉಪನೊಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ ಎಂದು ಶಾಸಕರು ಹೇಳಿದರು.
ಆರ್ಎಂಎಸ್ಎ ಯೋಜನೆಯಡಿ ಸರ್ಕಾರಿ ಪ್ರೌಢ ಶಾಲೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕಲ್ಪಿಸಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ರೈತರಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ ಮುರಳೀಧರ ತಳ್ಳಿಕೇರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ, ಡಿವಾಯ್ಎಸ್ಪಿ ಪ್ರಭು ಸೇರಿದಂತೆ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ