ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಡೆಸಲಿದ್ದಾರೆ.
ಅಂತೆಯೇ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳು ತಾವು ಪ್ರಾರಂಭಿಸಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಕುರಿತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಗ್ರಾಮ ವಾಸ್ತವ್ಯವನ್ನು ಮುಖ್ಯಮಂತ್ರಿಗಳು ಪ್ರಾರಭಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರದ ಆಡಳಿತ ಚುರುಕುಗೊಳಿಸಲು ಮತ್ತು ಸರ್ಕಾರ ಯೋಜನೆಗಳ ಅನುಷ್ಠಾನ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟರು.
ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಜೂನ್ 21 ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ನಡೆಸುವುದಾಗಿ ತಿಳಿಸಿದರು.
ಈ ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಈ. ವಿ. ರಮಣ ರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿ ಗಳ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ