ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಆರ್.ಎಸ್.ಎಸ್. ಸಹಸಂಚಾಲಕ ಮುಕುಂದ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಗುಜರಾತ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಈ ಬೆಳವಣಿಗಗಳ ನಡುವೆಯೇ ಆರ್.ಎಸ್.ಎಸ್ ನಾಯಕ ಮುಕುಂದ್ ಇಂದು ಬೆಳಿಗ್ಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿ, ಸುದೀರ್ಘ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಗುಜರಾತ್ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಬೊಮ್ಮಾಯಿ ಈ ಹಿಂದೆ ಸುಳಿವು ನೀಡಿದ್ದರು. ಇದೀಗ ಗುಜರಾತ್ ಚುನಾವಣಾ ಫಲಿತಾಂಶವೂ ಪ್ರಕಟವಾಗಿದ್ದು, ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಗುಜರಾತ್ ಚುನಾವಣಾ ಫಲಿತಾಂಶದ ರೀತಿಯೇ ಕರ್ನಾಟಕದಲ್ಲಿಯೂ ಮುಂದಿನ ಚುನಾವಣೆಯಲ್ಲಿ ಫಲಿತಾಂಶ ಬರಬೇಕು ಎಂದು ಬಿಜೆಪಿ ವರಿಷ್ಠರು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮುಕುಂದ್ ಅವರು ಸಿಎಂ ಬೊಮ್ಮಾಯಿ ಅವರನ್ನು ದಿಢೀರ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಆರ್ ಎಸ್ ಎಸ್ ನಾಯಕ ಮುಕುಂದ್ ಭೆಟಿ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ವಿ.ಸೋಮಣ್ಣ, ಶಿವರಾಮ್ ಹೆಬ್ಬಾರ್, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ರಘುಪತಿ ಭಟ್ ಮೊದಲಾದವರು ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಆರ್ ಎಸ್ ಎಸ್ ಸಹಸಂಚಾಲಕರಿಂದ ಸಿಎಂ ಭೇಟಿ, ಸಚಿವರು, ಶಾಸಕರಿಂದ ಸಮಾಲೋಚನೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
https://pragati.taskdun.com/karnataka-maharashtra-border-isuebelagavimesmahamelavdecember-19/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ