ಪ್ರಗತಿವಾಹಿನಿ ಸುದ್ದಿ, ಗೋಕಾಕ :
ತಾಲೂಕಿನ ಕೌಜಲಗಿ, ಗೋಸಬಾಳ ಭಾಗದ ಬಹು ವರ್ಷಗಳ ರೈತರ ಬೇಡಿಕೆಯಾಗಿದ್ದ ಕಲ್ಮಡ್ಡಿ ಏತ ನೀರಾವರಿ ಯೋಜನೆ ಮೂಲಕ ನೀರಾವರಿ ಸೌಲಭ್ಯ ಒದಗಿಸುವ ೧೬೧.೨೦ ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಶುಕ್ರವಾರದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆಗೆ ಅನುಮೋದನೆ ದೊರೆತಿದೆ ಎಂದಿದ್ದಾರೆ.
ಕೌಜಲಗಿ, ಗೋಸಬಾಳ, ಬಿಲಕುಂದಿ, ಬಗರನಾಳ, ಮನ್ನಿಕೇರಿ ಹಾಗೂ ದಾಸನಾಳ ಗ್ರಾಮಗಳ ಸುಮಾರು ೩೯೦೦ ಹೆಕ್ಟರ ಪ್ರದೇಶ ನೀರಾವರಿ ಸೌಲಭ್ಯ ಕಲ್ಪಿಸಿಕೊಡುವ ರೈತರ ಮಹತ್ವಾಕಾಂಕ್ಷೆ ಯೋಜನೆಗೆ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿ ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಕೌಜಲಗಿ ಭಾಗದ ರೈತರಿಗೆ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿದ್ದೇನೆ. ರೈತರ ಮಹತ್ವಾಕಾಂಕ್ಷೆಯ ಕಲ್ಮಡ್ಡಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮಟ್ಟದಲ್ಲಿ ಶ್ರಮಿಸಿದ್ದು, ಒಂದು ವರ್ಷದೊಳಗೆ ಕಲ್ಮಡ್ಡಿ ಏತ ನೀರಾವರಿ ಯೋಜನೆ ಕಾಮಗಾರಿ ಮುಗಿಯಲಿದ್ದು, ಕೌಜಲಗಿ-ಗೋಸಬಾಳ ಭಾಗಶಃ ನೀರಾವರಿ ಪ್ರದೇಶವಾಗಲಿದೆ ಎಂದು ಹೇಳಿರುವ ಅವರು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಗೆ ಶೀಘ್ರದಲ್ಲಿಯೇ ಶಿಲಾನ್ಯಾಸ ನೆರವೇರಿಸುವುದಾಗಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲರಿಗೂ ಶೇರ್ ಮಾಡಿ. ಹೆಚ್ಚಿನ ಸುದ್ದಿಗಳಿಗಾಗಿ pragativahini.com ನೋಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ