ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಚೀನಾದಲ್ಲಿ BF.7 ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಗಂಭೀರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ಕಟ್ಟೆಚ್ಚರವಹಿಸುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮಾನ್ಸುಖ್ ಮಾಂಡವೀಯ, ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಸ್ಫೋಟಗೊಂಡಿದೆ. ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲಾಗುತ್ತಿದೆ. ದೇಶದಲ್ಲಿ ಕೋವಿಡ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಪ್ರಮುಖವಾಗಿ ಚೀನಾ, ಜಪಾನ್, ಹಾಂಕಾಂಗ್, ದಕ್ಷಿಣ ಕೊರಿಯಾ, ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಇದ್ದರೂ ಕೂಡ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆಗೆ ಸೂಚಿಸಲಾಗಿದೆ. ಇನ್ನು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ಸ್ಟೇಷನ್ ಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿರುವಂತೆ ಅಂತರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಮತ್ತೆ ಕ್ವಾರಂಟೈನ್ ನಿಯಮ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ. ವಿದೇಶಿ ಪ್ರಯಾಣಿಕರಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಲ್ಲಿ ದೇಶದಲ್ಲಿ ಮತ್ತೆ ಕ್ವಾರಂಟೈನ್ ನಿಯಮ ಮರುಕಳಿಸುವ ಬಗ್ಗೆ ಕೇಂದ್ರ ಸಚಿವರು ಸುಳಿವು ನೀಡಿದ್ದಾರೆ.
*KSRTC, BMTC ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ*
https://pragati.taskdun.com/ksrtcbmtcmetromask-rulscovidbf-7-virus/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ