*ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದ ಸಚಿವ ಅಶ್ವತ್ಥನಾರಾಯಣ; ನೀವೇ ಕೋವಿ ಹಿಡಿದು ಬನ್ನಿ; ತೀಕ್ಷ್ಣವಾಗಿ ಪ್ರತಿಕ್ರಿಯೆ ಕೊಟ್ಟ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ಸಚಿವ ಅಶ್ವತ್ಥ ನಾರಾಯಣ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಟಿಪ್ಪುವನ್ನು ಹೊಡೆದು ಹಾಕಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಚಿವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಡಕ್ ತಿರುಗೇಟು ನೀಡಿದ್ದಾರೆ.
ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥನಾರಾಯಣ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಹತ್ಯೆಗೆ ಅಶ್ವತ್ಥನಾರಾಯಣ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?
ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಕಿಡಿಕಾರಿದ್ದಾರೆ.
ಸಚಿವ ಅಶ್ವತ್ಥ ನಾರಾಯಣ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ.
*ಕಲುಷಿತ ನೀರು ಸೇವಿಸಿ ಮೂವರು ಮಹಿಳೆಯರು ಸಾವು*
https://pragati.taskdun.com/contaminated-wateryadagiri3-deaths/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ