ಪ್ರಗತಿವಾಹಿನಿ ಸುದ್ದಿ; ಹಾವೇರಿ: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಕೋಣನಕೇರಿಯಲ್ಲಿ ಮಂಗಳವಾರ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ಹಾಗೂ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತಾನಾಡಿದರು.
ನನ್ನ ಕ್ಷೇತ್ರದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಸ್ತುತ ವರ್ಷ 151 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 500 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ. ಬರುವ ಅಗಸ್ಟ್ 15ರ ಒಳಗಾಗಿ ರಾಜ್ಯದ ಎಲ್ಲ ಸರಕಾರಿ ಶಾಲೆಗಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲು 280 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಟಲ್ ಟಿಕರಿಂಗ್ ಮಾದರಿಯಲ್ಲಿ ರಾಜ್ಯದಲ್ಲಿ ಟಿಕರಿಂಗ್ ಲ್ಯಾಬ್ ನಿರ್ಮಿಸಲು ಅನುದಾನ ನೀಡಲಾಗಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವರ್ಷದ ಬಜೆಟ್‌ನಲ್ಲಿ ಹೊಸ 10 ಪಿಯುಸಿ ಕಾಲೇಜು ಮಂಜೂರು ಮಾಡಲಾಗಿದ್ದು, ಈ ಕಾಲೇಜುಗಳಲ್ಲಿ ಕಡ್ಡಾಯವಾಗಿ ವಿಜ್ಞಾನ ವಿಷಯ ಭೋಧನೆ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಬಿಲ್ & ಮಿಲಿಂಡಾ ಗೇಟ್ಸ್ ಸಂಸ್ಥೆಯೊಂದಿಗೆ ರಾಜ್ಯದ ನಾಲ್ಕು ಜಿಲ್ಲೆಗಳ ಹಾವೇರಿ, ದಾವಣಗೆರೆ, ತುಮಕೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳ್ಳುತ್ತಿದೆ. ನಮ್ಮ ಶೈಕ್ಷಣಿಕ ಚಿಂತನಯಲ್ಲಿ ದೊಡ್ಡ ಬದಲಾವಣೆ ತಂದಿದ್ದು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಬದಲಾವಣೆ ತರಲಾಗಿದೆ. ಕಳೆದ ಎರಡು ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ 11% ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಶೇ.12 ರಷ್ಟು ಅನುದಾನವನ್ನು ನೀಡಲಾಗಿದೆ.
ಜಿಂದಾಲ ಕಂಪನಿಯ ಸಹಭಾಗಿತ್ವದಲ್ಲಿ ಕ್ಷೇತ್ರದಲ್ಲಿ 10 ಶಾಲೆಗಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ