ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಬಾರಾ ಸಮುದಾಯದವರು ಕರೆ ನೀಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಶಿಕಾರಿಪುರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಯಡಿಯುರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದ್ದು, ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ಮುಖಂಡರು ಘಟನೆಗೆ ಕಾರಣ ಎಂದು ಹೇಳಿದ್ದಾರೆ.
ಬಂಜಾರಾ ಸಮುದಾಯದ ಜನರನ್ನು ಪ್ರಚೋದಿಸಿ ಪ್ರತಿಭಟನೆ ನಡೆಸುವಂತೆ ಮಾಡಿದ್ದಾರೆ. ಯಾರೂ ಕೂಡ ಪ್ರಚೋದನೆಗೆ ಒಳಗಾಗಬೇಡಿ. ಸಮಾಜ ಪ್ರಕ್ಷುಬ್ಧಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.
ರಾಜಕೀಯ ಲಾಭಕ್ಕಾಗಿ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಮಾಡುತ್ತಿರುವ ಶಕುನಿ ಕೆಲಸದ ಬಗ್ಗೆ ಈಗ ರಾಜ್ಯ ಉಸ್ತಿವಾರಿ ರಣದೀಪ್ ಸುರ್ಜೇವಾಲಾ ಮಾತನಾಡಲಿ ಎಂದು ಆಗ್ರಹಿಸಿದ್ದಾರೆ.
ಒಳಮೀಸಲಾತಿ ವಿಂಗಡಣೆ ವಿಚಾರದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ, ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ