Latest

ರಾಹುಲ್ ಜಾಗಕ್ಕೆ ಡಿ.ಕೆ.ಶಿವಕುಮಾರ್?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 

ರಾಹುಲ್ ಗಾಂಧಿ ರಾಜೀನಾಮೆ ನಂತರ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಯಾರು? ಇಂತಹದೊಂದು ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ರಾಹುಲ್ ಅವರ ಸ್ಥಾನವನ್ನು ಕರ್ನಾಟಕ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರು ತುಂಬಬೇಕು ಎಂಬ ಒತ್ತಾಸೆ ಕೇಳಿಬಂದಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಹೌದು, ಇತ್ತೀಚೆಗೆ ಪತ್ರಕರ್ತರು ಟ್ವಿಟರ್ ನಲ್ಲಿ ನಡೆಸಿದ, ‘ಕಾಂಗ್ರೆಸ್ ಮುಂದಿನ ಅಧ್ಯಕ್ಷರು ಯಾರಾಗಬೇಕು?’ ಎಂಬ ರಾಷ್ಟ್ರೀಯ ಸಮೀಕ್ಷೆಯಲ್ಲಿ ಘಟಾನುಘಟಿ ನಾಯಕರ ನಡುವೆ ಡಿ.ಕೆ. ಶಿವಕುಮಾರ್ ಅವರ ಹೆಸರು ಪ್ರಮುಖವಾಗಿ ಕೇಳಿ ಬಂದಿದೆ.

ಈ ಸಮೀಕ್ಷೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದ ಅಗ್ರ ನಾಲ್ವರು ನಾಯಕರಲ್ಲಿ ಡಿ.ಕೆ. ಶಿವಕುಮಾರ್ ಸಹ ಒಬ್ಬರಾಗಿದ್ದಾರೆ. ಈ ಸಮೀಕ್ಷೆಯಲ್ಲಿ ಒಟ್ಟು 14,068 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರು ಶೇ.14 ರಷ್ಟು ಮತಗಳನ್ನು ಪಡೆದಿದ್ದಾರೆ. ‘ಜೂನಿಯರ್ ಇಂದಿರಾ’ ಎಂದೇ ಖ್ಯಾತಿ ಪಡೆದಿರುವ ಪ್ರಿಯಾಂಕ ಗಾಂಧಿ ಶೇ.17 ರಷ್ಟು ಮತ ಪಡೆದಿದ್ದಾರೆ. ಪ್ರಿಯಾಂಕ ಹಾಗೂ ಡಿ.ಕೆ. ಶಿವಕುಮಾರ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಇನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶೇ.36 ಹಾಗೂ ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಶೇ.33 ರಷ್ಟು ಮತ ಪಡೆದು ಅಗ್ರ ಎರಡು ಸ್ಥಾನಗಳನ್ನು ಪಡೆದಿದ್ದಾರೆ.

ಇಲ್ಲಿ ಪ್ರಮುಖವಾಗಿ ಗಮನಿಸಬೇಕಾದ ವಿಷಯ ಎಂದರೆ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಡಿಸಿಎಂ ಡಾ.ಜಿ ಪರಮೇಶ್ವರ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರ ಹೆಸರು ಪಟ್ಟಿಯಲ್ಲಿ ಬಾರದೇ ಇರುವುದು. ಡಿ.ಕೆ. ಶಿವಕುಮಾರ್ ಇವರೆಲ್ಲರನ್ನೂ ಹಿಂದಿಕ್ಕಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button