*ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಏ.22) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಬೇಸಿಗೆ ಆರಂಭಗೊಂಡಿದ್ದು, ಮೇ ಅಂತ್ಯದವರೆಗೆ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕಾಗುತ್ತದೆ. ಆದ್ದರಿಂದ ನೀರಿನ ಅಭಾವ ಉಂಟಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು.
ನೀರಾವರಿ, ಹೆಸ್ಕಾಂ ಮತ್ತು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳು ಈ ಬಗ್ಗೆ ನಿರಂತರವಾಗಿ ನಿಗಾ ವಹಿಸುವುದರ ಜತೆಗೆ ಕುಡಿಯುವ ನೀರು ಅಭಾವ ನೀಗಿಸುವ ನಿಟ್ಟಿನಲ್ಲಿ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ನಿರ್ವಹಿಸಲು ಅನುಕೂಲವಾಗುವಂತೆ ತೆರೆದ ಬಾವಿಗಳನ್ನು ತೋಡಬೇಕು; ಕೊಳವೆಬಾವಿಗಳನ್ನು ದುರಸ್ತಿಗೊಳಿಸುವ ಮೂಲಕ ಜನರಿಗೆ ನೀರು ಪೂರೈಸಬೇಕು.
ಇದಲ್ಲದೇ ಸದ್ಯಕ್ಕೆ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಮಳೆಗಾಲದವರೆಗೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಎದುರಾಗಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು, ತುರ್ತು ಸಂದರ್ಭದಲ್ಲಿ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಕೊಳವೆ ಬಾವಿಗಳನ್ನು ಗುರುತಿಸಬೇಕು; ಅದೇ ರೀತಿ ಖಾಸಗಿ ಬಾವಿ ಮತ್ತು ಕೊಳವೆಬಾವಿಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನೀರಾವರಿ ಇಲಾಖೆಯ ಹಿಪ್ಪರಗಿ ವಿಭಾಗದ ಅಧೀಕ್ಷಕ ಎಂಜಿನಿಯರ್ ರಾಠೋಡ, ಹೆಸ್ಕಾಂ ಅಧೀಕ್ಷಕ ಎಂಜಿನಿಯರ್ ಗಿರಿಧರ್ ಕುಲಕರ್ಣಿ, ಚಿಕ್ಕೋಡಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಬಣಗಾರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ