*ಬಹಿರಂಗ ಪ್ರಚಾರ ಅಂತ್ಯ: ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ; ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಪ್ರಚಾರವು ಸೋಮವಾರ(ಮೇ 8) ಸಂಜೆ 6 ಗಂಟೆಗೆ ಅಂತ್ಯಗೊಂಡಿರುತ್ತದೆ. ಯಾವುದೇ ರೀತಿಯ ಚುನಾವಣಾ ಬಹಿರಂಗ ಸಭೆ-ಸಮಾರಂಭಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮತದಾನ ಅಂತ್ಯಗೊಳ್ಳಲಿರುವ ಅವಧಿಗಿಂತ 48 ಗಂಟೆಗಳ ಮುಂಚಿನ ಅವಧಿಯಲ್ಲಿ ಬಹಿರಂಗ ಪ್ರಚಾರಕ್ಕೆ ನಿರ್ಬಂಧನೆ ಇರುತ್ತದೆ.
ಆದರೆ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿರುತ್ತದೆ. ಇಂದು ಸಂಜೆ6 ಗಂಟೆಯ ಬಳಿಕ ಬಹಿರಂಗ ಪ್ರಚಾರ ಕಂಡುಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಪ್ರಚಾರ ವಾಹನಗಳ ಬಳಕೆಗೆ ಅವಕಾಶ ಇರುವುದಿಲ್ಲ. ಜಿಲ್ಲೆಯ ಯಾವುದೇ ಭಾಗದಲ್ಲಿ ಬಹಿರಂಗ ಪ್ರಚಾರ ಕಂಡುಬಂದರೆ ಕೂಡಲೇ ಪ್ರಕರಣಗಳನ್ನು ದಾಖಲಿಸಬೇಕು ಎಂದು ಹದಿನೆಂಟು ಮತಕ್ಷೇತ್ರಗಳ ಚುನಾವಣಾಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.
ಎಫ್.ಎಸ್.ಟಿ. ಸೇರಿದಂತೆ ಎಲ್ಲ ವಿಚಕ್ಷಣಾ ತಂಡಗಳು ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ