
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ನಾಳೆ ನಡೆಯುವ ವಿಧಾನಸಭಾ ಚುನಾವಣೆ ಮತದಾನಕ್ಕೆ ಮಳೆಯ ಭೀತಿ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಇಂದಿನಿಂದ ಮೇ13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಮಳೆ ಹಿನ್ನೆಲೆಯಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನ ಹಲವೆಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹುಬ್ಬಳ್ಳಿ, ಗದಗ, ಕಲಬುರ್ಗಿ ಜಿಲ್ಲೆಗಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹುಬ್ಬಳ್ಳಿಯಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ, ಅಂಗಡಿ, ಮನೆಗಳಿಗೆ ನೀರು ನುಗ್ಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ