ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ರಾಜ್ಯಕ್ಕೆ ಹಾಗೂ ಸರಕಾರಕ್ಕೆಉತ್ತಮ ಹೆಸರು ತರುವ ದಿಸೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಸಚಿವರಾದ ನಂತರ ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಜನರು ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮ ಕರ್ತವ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಜವಾಬ್ದಾರಿ ಮತ್ತು ಸೂಕ್ಷ್ಮವಾದ ಇಲಾಖೆ ಕೂಡ ಹೌದು. ಇಲಾಖೆಯಲ್ಲಿ ಸಣ್ಣ ಲೋಪವನ್ನೂ ಸಹಿಸಲು ಸಾಧ್ಯವಿಲ್ಲ. ನಮ್ಮ ನಿರೀಕ್ಷೆ ಮತ್ತು ವೇಗಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.
ಹೊಸದಾಗಿ ಘೋಷಣೆಯಾಗಿರುವ ಗೃಹಲಕ್ಷ್ಮೀ ಸೇರಿದಂತೆ ಇಲಾಖೆಯ ಪ್ರತಿಯೊಂದು ಯೋಜನೆಗಳನ್ನೂ ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಸಬೇಕು. ಯಾವುದೇ ರೀತಿಯ ದೂರುಗಳಿಗೆ ಅವಕಾಶವಿರಬಾರದು. ಇಲಾಖೆ ಉತ್ತಮವಾಗಿ ಕೆಲಸ ನಿರ್ವಹಿಸಿದರೆ ಸರಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು ಎಂದು ಹೆಬ್ಬಾಳಕರ್ ತಿಳಿಸಿದರು.
ಮುಂದಿನ ದಿನಗಳಲ್ಲಿ ವಿಸ್ತೃತವಾಗಿ ಇಲಾಖೆಗೆ ಸಂಬಂಧಿಸಿದ ಚರ್ಚೆ ನಡೆಸಲಾಗುವುದು. ಜೊತೆಗೆ ಪ್ರತಿ ಜಿಲ್ಲೆಗೂ ತೆರಳಿ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಹಾಗಾಗಿ ಹೊಸ ಸರಕಾರದ ನಿರೀಕ್ಷೆಗೆ ತಕ್ಕಂತೆ ನಿಮ್ಮ ಕಾರ್ಯನಿರ್ವಹಣೆ ಇರಲಿ ಎಂದು ಅವರು ಹೇಳಿದರು.
ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ತಗ್ಗಿಸುವುದು ಗ್ಯಾರಂಟಿಯ ಯೋಜನೆಗಳ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್
https://pragati.taskdun.com/the-objective-of-the-guarantee-is-to-reduce-the-financial-burden-on-the-common-man-dcm-d-k-shivakumar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ