ಜನ-ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು: ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಳೆಗಾಲ ವಿಳಂಬವಾಗುತ್ತಿರುವುದರಿಂದ ಜಿಲ್ಲೆಯ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುತ್ತದೆ. ಆದ್ದರಿಂದ ಎಲ್ಲ ತಹಶೀಲ್ದಾರರು ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗತ್ಯವಿರುವ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ಪೂರೈಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸೋಮವಾರ (ಜೂ.19) ನಡೆದ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು
ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಆಯಾ ತಾಲ್ಲೂಕು ಅಥವಾ ಮತಕ್ಷೇತ್ರದಲ್ಲಿ ಇರುವ ಸಮಸ್ಯೆಯನ್ನು ಕೂಲಂಕಷವಾಗಿ ಪರಿಶೀಲಿಸಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು. ಇದರ ಆಧಾರದ ಮೇಲೆ ಹೆಚ್ಚುವರಿ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಲಭ್ಯವಿರುವ ಅನುದಾನದಲ್ಲಿ ಶಾಸಕರ ಸಲಹೆಯ ಪ್ರಕಾರ ಕಾಮಗಾರಿಗಳನ್ನು ಆರಂಭಿಸಬೇಕು.
ಜನರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುರ್ತು ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿರುತ್ತದೆ.
ಪ್ರತಿ ತಾಲ್ಲೂಕಿಗೆ ಇನ್ನೂ ಹೆಚ್ಚಿನ ಅನುದಾನ ಹೊಂದಾಣಿಕೆ ಮೂಲಕ ಕೂಡ ಲಭಿಸಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬಹುದು.
ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸೂಚನೆ:
ಜಿಲ್ಲೆಯಲ್ಲಿ ಎಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ತಹಶೀಲ್ದಾರರು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಹಾಗೂ ತುರ್ತು ಕಾಮಗಾರಿ ಆರಂಭಿಸಲು ಅನುದಾನ ಲಭ್ಯವಿದ್ದು, ಈ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಬೇಕು ಎಂದು ಹೇಳಿದರು.
ಎಲ್ಲ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿಗಳಲ್ಲಿ ಅನುದಾನ ಲಭ್ಯವಿದ್ದು, ಖಾಸಗಿ ಕೊಳವೆಬಾವಿಗಳು ಲಭ್ಯವಿದ್ದರೆ ಅವುಗಳನ್ನು ಕೂಡಲೇ ಬಾಡಿಗೆ ಪಡೆದುಕೊಳ್ಳಬೇಕು ಎಂದರು.
ತಹಶೀಲ್ದಾರರು ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತುಕೊಂಡು ಕೂಡಲೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು, ಅಥಣಿ ತಾಲ್ಲೂಕಿನ ಏಳು ಗ್ರಾಮ ಪಂಚಾಯತಿ ಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 40 ಕಡೆ ಕೊಳವೆಬಾವಿಗಳ ಮೂಲಕ ನೀರು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಇದೇ ರೀತಿ ಜಿಲ್ಲೆಯ ನಾಲ್ಕೈದು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ.
ಕೊಳವೆಬಾವಿ ಕೊರೆಯಲು ಯಾವುದೇ ರೀತಿಯ ದುಡ್ಡಿನ ಕೊರತೆ ಇರುವುದಿಲ್ಲ. ಆದ್ದರಿಂದ ಎಲ್ಲಿ ಸಾಧ್ಯವೋ ಅಲ್ಲಿ ತೆರೆದ ಬಾವಿ ಹಾಗೂ ಕೊಳವೆ ಬಾವಿ ನಿರ್ಮಿಸಲು ಪ್ರಸ್ತಾವನೆಗಳನ್ನು ಕೂಡ ಪಡೆಯಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಸಿಇಓ ಹರ್ಷಲ್ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕರಾದ ಈಶ್ವರ ಉಳ್ಳಾಗಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ