ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ಯುವಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬರದಿದ್ದರೆ, ನಾನು ಮಂತ್ರಿಯಾಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ, ಆದರೆ ಈಗ ಸರ್ಕಾರವು ಬಂದಿದೆ. ಮಂತ್ರಿಯೂ ಆಗಿದ್ದೇನೆ, ಆದ್ದರಿಂದ ಬೇರೆಯವರಿಗೆ ನಮ್ಮ ಶಾಸಕರೊಂದಿಗೆ ಚರ್ಚಿಸಿ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ನಂತರ ವ್ಯಾಕ್ಸಿನ್ ಡಿಪೋದಲ್ಲಿ ನಡೆದ ಅಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವ್ಯಾಕ್ಸಿನ್ ಡಿಪೋದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಪರವಾನಿಗೆ ನೀಡಿರುವುದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಹೆರಿಟೇಜ್ ಪಾರ್ಕ್ ಅಭಿವೃದ್ಧಿಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಅಲ್ಲಿ ಮರಗಳನ್ನು ಕಡಿದು ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಈ ಕುರಿತು ತನಿಖೆ ಕೈಗೊಂಡು ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದ ಅವರು, ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಮಟ್ಟದಲ್ಲೇ ಚರ್ಚೆ ನಡೆದಿದೆ ಎಂದರು.
ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲಾ, ಇನ್ನೂಎರಡು ತಿಂಗಳಿಗೆ ಆಗುವಷ್ಟು ನೀರು ಹಿಡಕಲ್ ಡ್ಯಾಮ್ ನಲ್ಲಿ ಸಂಗ್ರಹ ಇದೆ. ಈಗಾಗಲೇ ನೀರು ಕೂಡ ಬರುತ್ತಿದೆ ಎಂದು ಮಾಧ್ಯಮದವರಿಗೆ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ