ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮನೆ ಯಜಮಾನಿಗೆ 2000 ರೂ ನೀಡುವ ಗೃಹ ಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದರು.
ರಾಷ್ಟ್ರೀಯ ನಾಯಕರನ್ನು ಕರೆಸಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕ ಒನ್, ಗ್ರಾಮ್ ಒನ್, ಬಾಪೂಜಿಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದು ತಿಳಿಸಿದರು.
ಜಿಎಸ್ ಟಿ ಮತ್ತು ಆದಾಯ ತೆರಿಗೆ ಪಾವತಿಸುವವರಿಗೆ ಯೋಜನೆ ಅನ್ವಯವಾಗುವುದಿಲ್ಲ. ಏನಾದರೂ ಗೊಂದಲವಿದ್ದರೆ 8147500500 ಮೊಬೈಲ್ ಸಂಪರ್ಕಿಸಬಹುದು ಎಂದು ಹೆಬ್ಬಾಳಕರ್ ತಿಳಿಸಿದರು.
ಅರ್ಜಿ ಫಾರ್ಮ್ ತುಂಬಲು ನೆರವಾಗಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು. ಅವರಿಗೆ ಯಾವುದೇ ರೀತಿಯ ಹಣ ನೀಡಬಾರದು. ಸರಕಾರವೇ ಅವರಿಗೆ ಹಣ ನೀಡಲಿದೆ ಎಂದು ಹೆಬ್ಬಾಳಕರ್ ತಿಳಿಸಿದರು.
ಫೋನ್ ಮೂಲಕ ಮಾಹಿತಿ
ಪ್ರತಿ ಫಲಾನುಭವಿ ನೊಂದಣಿಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು1902 ಕರೆ ಮಾಡಿ ತಿಳಿದುಕೊಳ್ಳಬಹುದು. ಜೊತೆಗೆ 8147500500ಗೆ ಎಸ್ಎಂಎಸ್ ಅಥವಾ ವಾಟ್ಸ್ ಆಪ್ ಮೂಲಕ ಸಂದೇಶ ಕಳುಹಿಸಿ ವಿವರ ಪಡೆದುಕೊಳ್ಳಬಹುದು. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5ರಿಂದ 7ರ ಅವಧಿಯಲ್ಲಿ ಹೋಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.
ಯೋಜನೆಗೆ ಬೇಕಾದ ದಾಖಲೆಗಳು
ಯೋಜನೆಯಡಿ ನೋಂದಾಯಿಸಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕು. ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲೆ ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.
ನಿಗದಿತ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಲಿದೆ ಎಂದು ಸಚಿವರು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ