*ಭಾರಿ ಮಳೆ, ಹಠಾತ್ ಪ್ರವಾಹ ಮುನ್ಸೂಚನೆ; ಇಂದು ಸಂಜೆ ಜಿಲ್ಲಾಧಿಕಾರಿಗಳು, ಸಿಇಒಗಳಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಜಿಲ್ಲಾಧಿಕಾರಿಗಳ ಹಾಗೂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಮಳೆ ಹಾನಿ, ಪ್ರವಾಹ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಆಯಾ ಜಿಲ್ಲೆಗಳಲ್ಲಿ ಇದ್ದಸ್ಥಳದಿಂದಲೇ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿದೆ.
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಿಂದ ಹಠಾತ್ ಪ್ರವಾಹ ಸಂಭವಿಸಬಹುದು ಎಂದ್ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಭವನೀಯ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ