ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ನೇಮಕಾತಿ ನಡೆಯಲಿದ್ದು, ಸಿ.ಟಿ.ರವಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಈ ವಿಚಾರವಾಗಿ ಸ್ವತಃ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ, ನಾನು ಪಕ್ಷದ ಕಾರ್ಯಕರ್ತ. ರಾಜ್ಯಾಧ್ಯಕ್ಷ ಹುದ್ದೆ ಕೇಳಿ ಪಡೆಯುವಂತದ್ದಲ್ಲ ಎಂದು ಹೇಳಿದ್ದಾರೆ.
ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುತ್ತಾರೆ ಎಂಬ ವಿಚಾರವು ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷ ಸ್ಥಾನ ದೊಡ್ಡ ಹುದ್ದೆ. ಅದನ್ನು ಕೇಳಿ ಪಡೆಯಲು ಆಗಲ್ಲ ಎಂದಿದ್ದಾರೆ.
ಸಿ.ಟಿ.ರವಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿ.ಟಿ.ರವಿ, ಅವರು ಅಂತಿಮ ನಿರ್ಣಯ ಆಗಿದೆ ಎಂದು ಹೇಳಿಲ್ಲ. ಈ ಬಗ್ಗೆ ಚರ್ಚೆ ನಡೆದಿದೆ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನ ಏನು ಎಂಬುದು ಗೊತ್ತಿಲ್ಲ. ಭವಿಷ್ಯ ಎನ್ನುವುದು ನಿರೀಕ್ಷೆ ಮತ್ತು ಆಕಾಂಕ್ಷೆ. ಭವಿಷ್ಯದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
35 ವರ್ಷಗಳಿಂದಲೂ ಬಿಜೆಪಿಯಲ್ಲಿದ್ದೇನೆ. ಆಗಿನಿಂದಲೂ ಯಡಿಯೂರಪ್ಪನವರ ಆಶಿರ್ವಾದ ಪಡೆಯುತ್ತಾ ಬಂದಿದ್ದೇನೆ. ಈಗಲೂ ಪಡೆದಿದ್ದೇನೆ. ಅದರಲ್ಲಿ ವಿಶೇಷತೆ ಏನೂ ಇಲ್ಲ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ