*ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಜನತೆ ಸಮಸ್ಯೆಗೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ*
ರಾಯಬಾಗ ಕಾಂಗ್ರೆಸ್ ಘಟಕದಿಂದ ಸಚಿವ ಸತೀಶ್ ಜಾರಕಿಹೊಳಿಗೆ ಅದ್ದೂರಿ ಸನ್ಮಾನ
ಪ್ರಗತಿವಾಹಿನಿ ಸುದ್ದಿ; ರಾಯಬಾಗ: 2013ರಲ್ಲಿ ಮಂತ್ರಿಯಾಗಿದ್ದಾಗ ತಾಲೂಕುವಾರು ಸಭೆ ಮಾಡಿದ್ದೆ, ಜಿಲ್ಲಾಮಟ್ಟದಲ್ಲಿ ಸ್ಥಳೀಯ ಮಟ್ಟದ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಆಗಲ್ಲ. ಅದೇ ಕಾರಣ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಮೂಲಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆಯ ಲಾಭಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು. ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಬೇಕು ಎಂದು ಅಧಿಕಾರಿಗಳನ್ನು ಸೂಚಿಸಿದರು.
ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾರಿ ಪ್ರಥಮ ಬಾರಿಗೆ ರಾಯಬಾಗ ತಾಲೂಕಿಗೆ ಆಗಮಿಸಿದ್ದರಿಂದ ರಾಯಬಾಗ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಘಟಕದಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಪಟ್ಟಣದ ಮಹಾವೀರ ಸಮುದಾಯ ಭವನದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಚುನಾವಣೆಗೆ ನಿಲ್ಲುವವರು ಆಸಕ್ತಿ ಇರಬೇಕು. ಲೋಕಸಭೆ ಚುನಾವಣೆ, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದರು.
ವಿವಿಧ ಕಾರ್ಯಕ್ರಮ ಮತ್ತು ಸಭೆಗಳಲ್ಲಿ ಭಾಗವಹಿಸಲು ರಾಯಬಾಗ ನಗರಕ್ಕೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನಗಳನ್ನು ಸಲ್ಲಿಸಿದರು. ನಂತರ ರಾಯಬಾಗ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಜನಸಂಪರ್ಕ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಎಸ್.ಬಿ. ಘಾಟಗೆ,ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ, ಸದಾಶಿವ ಬೂಟಾಳಿ, ಅರ್ಜುನ್ ನಾಯಕವಾಡಿ ಸೇರಿದಂತೆ ಪಕ್ಷದ ಮುಂಚೂಣಿ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ